Wednesday, 11th December 2024

ಕರ್ನಾಟಕ ಚುನಾವಣೆ: ಧರ್ಮೇಂದ್ರ ಪ್ರಧಾನ್ ಉಸ್ತುವಾರಿ, ಕೆ.ಅಣ್ಣಾಮಲೈ ಸಹ ಉಸ್ತುವಾರಿ

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ವರಿಷ್ಠ ಮಂಡಳಿ ಭರಿ ಕಸರತ್ತು ನಡೆಸುತ್ತಿದೆ. ಅನೇಕ ಪ್ರಯೋಗಗಳಿಗೂ ಮುಂದಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಉಸ್ತುವಾರಿಯನ್ನಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯನ್ನಾಗಿ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ನೇಮಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಲಹೆಯಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶನಿವಾರ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿ ಅರುಣ್ ಸಿಂಗ್ ಮುಂದುವರಿದಿದ್ದಾರೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ. ಧರ್ಮೇಂದ್ರ ಪ್ರಧಾನ್ ಅವರು ಪ್ರಸ್ತುತ ಕೇಂದ್ರ ಶಿಕ್ಷಣ ಸಚಿವರಾಗಿದ್ದಾರೆ. ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿಯಾಗಿದ್ದ ಕೆ.ಅಣ್ಣಾಮಲೈ ಅವರು ಪ್ರಸ್ತುತ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ರಾಗಿದ್ದಾರೆ.

ಬಿಜೆಪಿ ಈಗಾಗಲೇ ಚುನಾವಣಾ ಪ್ರಚಾರಕ್ಕೆ ವೇದಿಕೆ ಸಿದ್ಧಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರುಗಳು ರಾಜ್ಯಕ್ಕೆ ಮೇಲಿಂದ ಮೇಲೆ ಭೇಟಿ ನೀಡಿ ಬಿಜೆಪಿಗೆ ಶಕ್ತಿ ತುಂಬುತ್ತಿದ್ದಾರೆ. ಅಮಿತ್ ಶಾ ಮೂರು ಬಾರಿ, ಪ್ರಧಾನಿ ಎರಡು ಬಾರಿ ಭೇಟಿ ನೀಡಿದ್ದು, ಸೋಮವಾರ ಮತ್ತೆ ರಾಜ್ಯಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ.

ಅಮಿತ್ ಶಾ ಕೂಡ ಸರಣಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.