Saturday, 14th December 2024

ಕೇರಳದ ಮೂರು ಕಡೆ ರೆಡ್‌ ಅಲರ್ಟ್‌, ನಾಲ್ಕು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ತಿರುವನಂತಪುರಂ: ಕೇರಳದ ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ತಿರುವನಂತಪುರಂ, ಕೊಲ್ಲಂ, ಅಲಪ್ಪುಳ ಮತ್ತು ಎರ್ನಾಕುಲಂ ಸೇರಿದಂತೆ ಇತರ ನಾಲ್ಕು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುತ್ತಿದ್ದು ಗಂಟೆಗೆ 40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಸ್ತುತ ಗುಡ್ಡಗಾಡು ಪ್ರದೇಶಗಳಲ್ಲಿ ರಾತ್ರಿ ಪ್ರಯಾಣ ನಿಷೇಧಿಸಿ ಇಡುಕ್ಕಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿ ಸಲು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ತಹಸೀಲ್ದಾರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ.

ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಎರ್ನಾಕುಲಂ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.