Thursday, 12th December 2024

ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನಾಳೆ ಅಧಿಕಾರ ಸ್ವೀಕಾರ

ನವದೆಹಲಿ: ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ (ಅಕ್ಟೋಬರ್ 26) ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕೂ ಮೊದಲು ಅವರು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಖರ್ಗೆ ಅವರು ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಕರ್ನಾಟಕದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾ ಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರು ಸಾಕ್ಷಿಯಾಗಲಿದ್ದಾರೆ.

ಅ.17ರಂದು ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು 7897 ಮತಗಳನ್ನು ಪಡೆದು ಗೆದ್ದಿದ್ದರೆ, ಅವರ ಸ್ಪರ್ಧಿ ಶಶಿ ತರೂರ್ ಅವರ 1072 ಮತಗಳನ್ನು ಪಡೆಯಲಷ್ಟೇ ಶಕ್ಯರಾಗಿದ್ದರು.

ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನದ ಹೊರತಾದ ವ್ಯಕ್ತಿ ಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗುತ್ತಿದ್ದಾರೆ. ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ಈ ಹಿಂದೆ ಎಸ್ ನಿಜಲಿಂಗಪ್ಪ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.