Saturday, 14th December 2024

Kolkata doctor Murder: ಟ್ರೈನಿ ವೈದ್ಯೆ ಕೊಲೆ ಪ್ರಕರಣ-ಆರೋಪಿ ಸಂಜಯ್‌ ರಾಯ್‌ ವಿರುದ್ಧ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ

kolkata doctor murder

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆರ್‌ಜಿ ಕರ್‌ ಮೆಡಿಕಲ್‌ ಕಾಲೇಜಿನಲ್ಲಿ(RG Kar Hospital) ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣ(Kolkata doctor Murder)ಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸಂಜಯ್ ರಾಯ್ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ಇಂದು ಚಾರ್ಜ್ ಶೀಟ್ ಸಲ್ಲಿಸಿದೆ.

ಆಗಸ್ಟ್ 9 ರಂದು ಆಸ್ಪತ್ರೆಯೊಳಗೆ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದಲ್ಲಿ ಅರೆಸ್ಟ್‌ ಆಗಿರುವ ಸಂಜಯ್‌ ರಾಯ್‌ ವಿರುದ್ಧ ಸಿಬಿಐ ಇಂದು ಮೊದಲ ಚಾರ್ಜ್‌ಶೀಟ್‌ ಸಲ್ಲಿಸಿದೆ. ಚಾರ್ಜ್‌ ಶೀಟ್‌ನಲ್ಲಿ ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಬಗ್ಗೆ ಯಾವುದೇ ಉಲ್ಲೇಖಗಳಿಲ್ಲ. ಆಕೆಯ ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ, ಸಂತ್ರಸ್ತೆಯನ್ನು ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ. ಆಕೆಯ ದೇಹದ ಮೇಲೆ 25 ಗಾಯದ ಗುರುತುಗಳು ಪತ್ತೆಯಾಗಿವೆ.

ಏನಿದು ಪ್ರಕರಣ?

ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್‌ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್‌ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿತ್ತು. ಕುತ್ತಿಗೆ ಮುರಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಟ್ರೈನಿ ವೈದ್ಯೆ ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸಿರುವ ವೈದ್ಯರ ಒತ್ತಾಯಕ್ಕೆ ಕೊನೆಗೂ ಮಮತಾ ಬ್ಯಾನರ್ಜಿ ಸರ್ಕಾರ ಮಣಿದಿದೆ. ವೈದ್ಯರ ಬೇಡಿಕೆಯಂತೆ ಕೋಲ್ಕತ್ತಾ ಪೊಲೀಸ್‌ ಕಮಿಷನರ್‌ ಮತ್ತು ಆರೋಗ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಘಟನೆಗೂ ಮುನ್ನ ಸಂಜಯ್‌ ರಾಯ್‌ ಆ ಕೊಠಡಿಗೆ ತೆರಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.ಹೀಗಾಗಿ ಪೊಲೀಸರು ಆತನನ್ನು ಅರೆಸ್ಟ್‌ ಮಾಡಿದ್ದಾರೆ. ಮತ್ತೊಂದೆಡೆ ಸಂತ್ರಸ್ತೆಯ ಪೋಷಕರನ್ನು ದಾರಿತಪ್ಪಿಸಲು ಮತ್ತು ಸಾಕ್ಷ್ಯವನ್ನು ತಿರುಚಲು ಯತ್ನಿಸಿದ ಆರೋಪದ ಮೇಲೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ ಸಂದೀಪ್ ಘೋಷ್ ಅವರನ್ನು ಸಿಬಿಐ ಬಂಧಿಸಿದೆ.

ಈ ಸುದ್ದಿಯನ್ನೂ ಓದಿ: Kolkata Doctors Protest: ಕೋಲ್ಕತ್ತಾದಲ್ಲಿ ಮತ್ತೆ ವೈದ್ಯರ ಮುಷ್ಕರ; ವಿವಿಧ ಬೇಡಿಕೆಗಳಿಗೆ ಆಗ್ರಹ