ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆಯು ಜಂಟಿಯಾಗಿ ಕೈಗೊಂಡ ಕಾರ್ಯಾಚರಣೆ ವೇಳೆ ಲಷ್ಕರೆ ತಯ್ಬಾ ಉಗ್ರ ಸಂಘಟನೆಯ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸಂಜೆಯೇ ಸೇನೆಯು ಕಾರ್ಯಾಚರಣೆ ಕೈಗೊಂಡಿದೆ. ಇದೇ ವೇಳೆ ಲಷ್ಕರೆ ತಯ್ಬಾ ಕಮಾಂಡರ್ ಬಶೀರ್ ಅಹ್ಮದ್ ಮಲಿಕ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ಇನ್ನು ರಾತ್ರಿಯಿಡೀ ಕಾರ್ಯಾಚರಣೆ ಮುಂದುವರಿದಿದ್ದು, ಶುಕ್ರವಾರ ಮತ್ತೆ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಇದರೊಂದಿಗೆ 24 ಗಂಟೆಯಲ್ಲಿ ಕಾಶ್ಮೀರದಲ್ಲಿ ಐವರು ಉಗ್ರರನ್ನು ಹತ್ಯೆ ಮಾಡಿದಂತಾಗಿದೆ.
ಒಂದು ವಾರದ ಹಿಂದಷ್ಟೇ ಭಾರತೀಯ ಸೇನೆಯು ಒಬ್ಬ ಉಗ್ರನನ್ನು ಎನ್‌ಕೌಂಟರ್ ಮಾಡಿತ್ತು. ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರ ಬಲಿಯಾಗಿದ್ದ. ಕಥೊಹಾಲನ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆ ವೇಳೆ ಲಷ್ಕರೆ ತಯ್ಬಾ ಉಗ್ರ ಸಂಘಟನೆಯ ಅಂಗ ಸಂಸ್ಥೆಯಾದ ದಿ ರೆಸಿಸ್ಟನ್ಸ್ ಫ್ರಂಟ್ ಉಗ್ರನನ್ನು ಹತ್ಯೆ ಮಾಡಲಾಗಿತ್ತು.
ಜಮ್ಮು-ಕಾಶ್ಮೀರದಲ್ಲಿ ಪ್ರಸಕ್ತ ವರ್ಷದಲ್ಲಿ ಇದುವರೆಗೆ 30ಕ್ಕೂ ಅಧಿಕ ಉಗ್ರರನ್ನು ಹತ್ಯೆಗೈದು, 204 ಉಗ್ರರನ್ನು ಬಂಧಿಸಿದರೂ ಇನ್ನೂ 111 ಉಗ್ರರು ಕಣಿವೆಯಲ್ಲಿ ಸಕ್ರಿಯರಾಗಿದ್ದಾರೆ ಎಂದು ತಿಳಿಸಿದ್ದಾರೆ.