Sunday, 15th December 2024

ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನ ಹತ್ಯೆ, ಯೋಧರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದ್ದು. ಇಬ್ಬರು ಯೋಧರು ಗಾಯ ಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಸ್‌ಎಫ್ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಬೆನ್ನಲ್ಲೇ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಉಗ್ರರು ನಡೆಸಿದ ಗುಂಡಿನ ದಾಳಿಯ ವೇಳೆ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಕುಲ್ಗಾಂ ಜಿಲ್ಲೆಯ ಮಾಲ್ಪೊರಾ ಮಿರ್ ಬಜಾರ್ ಪ್ರದೇಶದಲ್ಲಿ ಹಾದು ಹೋಗುತ್ತಿರುವ ಜಮ್ಮು-ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಸ್‌ಎಫ್ ಬೆಂಗಾವಲು ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ತಕ್ಷಣ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಹತ್ತಿರದ ಕಟ್ಟಡದಲ್ಲಿ ಅವಿತುಕೊಂಡರು.

‘ಲಷ್ಕರ್‌-ಎ-ತಯಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಅಡಗಿರುವ ಬಗ್ಗೆ ಶಂಕಿಸಲಾಗಿದೆ. ಇದುವರೆಗೆ ಓರ್ವ ಉಗ್ರನನ್ನು ಕೊಲೆಗೈಯಲಾಗಿದೆ. ಕಟ್ಟಡದ ಸಂಪೂರ್ಣ ಶೋಧ ನಡೆಯಬೇಕಿದೆ’ ಎಂದು ಕಾಶ್ಮೀರ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ವಿಜಯ್ ಕುಮಾರ್ ತಿಳಿಸಿದ್ದಾರೆ.