Friday, 29th November 2024

Ministry of External Affairs : ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಭಾರತ

Ministry of External Affairs

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ವಿರುದ್ಧ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ (Ministry of External Affairs) ಕಳವಳ ವ್ಯಕ್ತಪಡಿಸಿದೆ. ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಎಲ್ಲಾ ಅಲ್ಪಸಂಖ್ಯಾತರನ್ನು ರಕ್ಷಿಸುವ ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಒತ್ತಿ ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್, “ಭಾರತವು ಬಾಂಗ್ಲಾದೇಶ ಸರ್ಕಾರದೊಂದಿಗೆ ಹಿಂದೂಗಳು ಮತ್ತು ಇತರೆ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಉದ್ದೇಶಿತ ದಾಳಿಗಳ ಬಗ್ಗೆ ಚರ್ಚೆ ನಡೆಸಿದೆ. ಈ ವಿಷಯದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಬಾಂಗ್ಲಾದೇಶ ಸರ್ಕಾರ ಎಲ್ಲಾ ಅಲ್ಪಸಂಖ್ಯಾತರನ್ನು ರಕ್ಷಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕು,” ಎಂದು ಅವರು ತಿಳಿಸಿದ್ದಾರೆ.

ಭಾರತ ಹಾಗೂ ಬಾಂಗ್ಲಾದೇಶದ ವ್ಯವಹಾರ ಸಂಬಂಧದ ಬಗ್ಗೆ ಮಾತಾಡಿದ ವಕ್ತಾರ, ಹಳೆಯ ಸಂಬಂಧವೇ ಮುಂದುವರಿಯಲಿದೆ ಎಂದು ಹೇಳಿದರು. ಭಾರತದಿಂದ ಬಾಂಗ್ಲಾದೇಶಕ್ಕೆ ಸರಕುಗಳ ಪೂರೈಕೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಬಂಧಿತರಾದ ಚಿನ್ಮಯ್ ಕೃಷ್ಣ ದಾಸ್ ಬಗ್ಗೆ ಮಾತನಾಡಿ, ಹಿಂದೂ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರ ಪ್ರಕರಣದಲ್ಲಿ ಪಾರದರ್ಶಕತೆಯನ್ನು ತೋರಲು ಭಾರತವು ಬಾಂಗ್ಲಾದೇಶಕ್ಕೆ ಕರೆ ನೀಡಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಬಾಂಗ್ಲಾದೇಶದ ಹಿಂದೂ ಚಳುವಳಿಗಳ ನಾಯಕ ಹಾಗೂ ಇಸ್ಕಾನ್‌ ಮುಖ್ಯಸ್ಥ ಬಾಂಗ್ಲಾದೇಶ ಚಿನ್ಮಯ್ ಕೃಷ್ಣ ದಾಸ್ ಪ್ರಭು ಅವರನ್ನು ಬಂಧಿಸಲು ಬಾಂಗ್ಲಾ ಸರ್ಕಾರ ಸೂಚನೆ ನೀಡಿತ್ತು. ಅವರು ಬಾಂಗ್ಲಾ ತೊರೆದು ಭಾರತಕ್ಕೆ ಬರಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಚಿನ್ಮಯ್‌ ದಾಸ್‌ ಅವರನ್ನು ಸರ್ಕಾರದ ಸೂಚನೆ ಮೇರೆಗೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದರು. ಬಳಿಕ ಪೊಲೀಸರು ಬಂಧಿಸಿದ್ದರು. ಬಳಿಕ ಅಜ್ಞಾತ ಸ್ಥಳದಲ್ಲಿ ಪೊಲೀಸರು ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ, ನ್ಯಾಯಾಲವು ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ.

ಈ ಸುದ್ದಿಯನ್ನೂ ಓದಿ : Bangladesh Unrest: ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; 3 ಹಿಂದೂ ದೇವಾಲಯಗಳ ಮೇಲೆ ದಾಳಿ