ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಘಟನೆಗಳಿಂದ ಬೇಸತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ದಿನೇಶ್ ತ್ರಿವೇದಿ, ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಕುರಿತು ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿರುವ ದಿನೇಶ್ ತ್ರಿವೇದಿ, ನಾನು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜ್ಯದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ನನ್ನಿಂದ ಏನನ್ನೂ ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ನನ್ನನ್ನು ಇಲ್ಲಿಗೆ ಕಳುಹಿಸಿರುವ ಪಕ್ಷಕ್ಕೆ ಕೃತಜ್ಞನಾಗಿದ್ದೇನೆ. ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ನನ್ನಿಂದ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ. ನನಗೆ ಉಸಿರುಗಟ್ಟುತ್ತಿದೆ. ಇಲ್ಲಿ ಕುಳಿತುಕೊಂಡು ಏನನ್ನೂ ಮಾಡಲು ಸಾಧ್ಯವಾಗದಿದ್ದರೆ ರಾಜೀ ನಾಮೆ ನೀಡಬೇಕು ಎಂದು ನನ್ನ ಆತ್ಮವು ಹೇಳುತ್ತಿದೆ. ಹಾಗಾಗಿ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
ಕಳೆದ ತಿಂಗಳಿನಲ್ಲಷ್ಟೇ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ತೊರೆದಿರುವ ಪ್ರಮುಖ ನಾಯಕರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದರು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರು ವಂತೆಯೇ ಅನೇಕ ರಾಜಕೀಯ ಬೆಳಗಣಿಗೆಗಳು ಗರಿಗೆದರಿದ್ದು, ಚುನಾವಣಾ ರಂಗ ಕಾವೇರುತ್ತಿದೆ.