ಪುಣೆ: ಮೂಢನಂಬಿಕೆ ವಿರೋಧಿ ಹೋರಾಟಗಾರ, ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 11 ವರ್ಷಗಳ ಬಳಿಕ ಪುಣೆಯ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿದ್ದು, ಮೂವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.
ಸೆಷನ್ಸ್ ನ್ಯಾಯಾಧೀಶ ಪಿ.ಪಿ ಜಾಧವ್ ಇಂದು ತೀರ್ಪು ಪ್ರಕಟಿಸಿದರು. ದೋಷಿಗಳೆಂದು ಘೋಷಿಸಲ್ಪಟ್ಟ ಸಚಿನ್ ಅಂದುರೆ ಹಾಗೂ ಶರದ್ ಕಲಾಸ್ಕರ್‌ಗೆ ಜೀವಾವಧಿ ಶಿಕ್ಷೆ ಜತೆಗೆ ತಲಾ ₹ 5 ಲಕ್ಷ ದಂಡ ವಿಧಿಸಲಾಗಿದೆ. ಇತರ ಮೂವರು ಆರೋಪಿಗಳಾದ ವಿರೇಂದ್ರ ಸಿಂಗ್ ತಾವ್ಡೆ, ವಿಕ್ರಮ್ ಭಾವೆ ಮತ್ತು ಸಂಜೀವ್ ಪುನಾಲೇಕರ್ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಲಾಗಿದೆ.
ಮಹಾರಾಷ್ಟ್ರದ ಅಂಧ ಶ್ರದ್ಧಾ ನಿರ್ಮೂಲನ ಸಮಿತಿಯ ಅಧ್ಯಕ್ಷರಾಗಿದ್ದ ನರೇಂದ್ರ ದಾಭೋಲ್ಕರ್ ಅವರನ್ನು 2013ರ ಆಗಸ್ಟ್ 20ರಂದು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಬಲಪಂಥೀಯ ಗುಂಪಿನ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು.
ಪುಣೆಯ ಓಂಕಾರೇಶ್ವರ ಸೇತುವೆಯ ಮೇಲೆ ಬೆಳಗಿನ ವಾಕಿಂಗ್‌ಗೆ ಹೊರಟಿದ್ದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು 2013ರ ಆಗಸ್ಟ್ 20 ರಂದು ಕಿರಾತಕರು ಗುಂಡಿಕ್ಕಿ ಕೊಂದಿದ್ದರು. ಈ ಪ್ರಕರಣದಲ್ಲಿ ಐವರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.
ಈ ಪ್ರಕರಣದ ಪ್ರಮುಖ ಸಂಚುಕೋರ ಸನಾತನ ಸಂಸ್ಥೆ ಜೊತೆ ಸಂಪರ್ಕ ಹೊಂದಿದ್ದ ಡಾ.ವೀರೇಂದ್ರ ತಾವ್ಡೆ ಎಂದು ಸಿಬಿಐ ಆರೋಪಿಸಿತ್ತು.