ನವದೆಹಲಿ: ಒಡಿಶಾದಲ್ಲಿ ಕಂಡು ಕೇಳರಿಯದಂತೆ ನಡೆದ ಭೀಕರ ರೈಲು ದುರಂತದಲ್ಲಿ 250 ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಶ್ರೀಲಂಕಾ, ಆಸ್ಟ್ರೇಲಿಯಾ, ಕೆನಡಾ, ತೈವಾನ್ ಸೇರಿದಂತೆ ಹಲವು ರಾಷ್ಟ್ರಗಳ ನಾಯಕರು ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಒಡಿಶಾದ ಬನಹಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ತ್ರಿವಳಿ ರೈಲುಗಳ ಘರ್ಷಣೆ ನಡೆದಿದೆ. 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿವೆ. ಪ್ರಧಾನಿ ನರೇಂದ್ರ ಮೋದಿ, ಸಿಎಂ ನವೀನ್ ಪಟ್ನಾಯಕ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ರೈಲ್ವೆ ಸಚಿವ ಅಶ್ವಿನಿ ವೈಷ್ಟಣ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟ್ವೀಟ್ ಮಾಡಿ ಕಳವಳ ವ್ಯಕ್ತಪಡಿಸಿರುವ ಆಸ್ಟ್ರೇಲಿಯಾದ ವಿದೇಶಾಂಗ ವ್ಯವಹಾರಗಳ ಸಚಿವ ಪೆನ್ನಿ ವಾಂಗ್ ಅವರು, ವಿನಾಶಕಾರಿ ರೈಲು ಅಪಘಾತ ಹಲವು ಪ್ರಾಣಗಳನ್ನು ಬಲಿ ಪಡೆದಿದೆ. ಇದು ದುಃಖಕರ ಸಂಗತಿ. ಘಟನೆಯ ಬಗ್ಗೆ ಸಂತಾಪವಿದೆ ಎಂದು ಹೇಳಿದ್ದಾರೆ.
ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು, ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದ ಬಗ್ಗೆ ತಿಳಿದು ತೀವ್ರ ದುಃಖವಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ. ಈ ದುಃಖದ ಸಮಯದಲ್ಲಿ ಶ್ರೀಲಂಕಾ ಭಾರತದೊಂದಿಗೆ ನಿಂತಿರುತ್ತದೆ ಎಂದು ಹೇಳಿದ್ದಾರೆ.
ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಕೂಡ ರೈಲು ದುರಂತಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.