Friday, 20th September 2024

ನ್ಯೂಸ್ ಕ್ಲಿಕ್ ಸಂಸ್ಥಾಪಕ 9 ದಿನ ಪೊಲೀಸರ ವಶಕ್ಕೆ

ನವದೆಹಲಿ: ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿ ರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ 9 ದಿನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.
ಆರೋಪಿಗಳ 15 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು.
ಪೊಲೀಸರ ಮನವಿ ಪುರಸ್ಕರಿಸಿದ ದೆಹಲಿ ನ್ಯಾಯಾಲಯ, ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಅವರನ್ನು ನವೆಂಬರ್ 2, 2023 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಪುರ್ಕಾಯಸ್ಥ ಮತ್ತು ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರ ವಿಶೇಷ ಘಟಕ ಅಕ್ಟೋಬರ್ 3 ರಂದು ಬಂಧಿಸಿದ್ದು, ದೆಹಲಿ ಯಲ್ಲಿರುವ ನ್ಯೂಸ್ಕ್ಲಿಕ್ ಕಚೇರಿಯನ್ನು ಸೀಲ್ ಮಾಡಿದ್ದಾರೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಪತ್ರಕರ್ತರನ್ನು ವಿಚಾರಣೆಗೊಳಪಡಿಸ ಲಾಗಿದೆ.