Thursday, 19th September 2024

ನ್ಯೂಸ್ ಕ್ಲಿಕ್ ಸಂಸ್ಥಾಪಕ ಬಂಧನ ಪ್ರಕರಣದ ವಿಚಾರಣೆ ಮುಂದೂಡಿಕೆ

ನವದೆಹಲಿ: ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಮುಂದೂಡಿದೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠವು, ಇಬ್ಬರೂ ಆರೋಪಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ದೀಪಾವಳಿ ರಜೆಯ ನಂತರ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. ಈ ವಿಷಯವು ಸುಪ್ರೀಂ ಕೋರ್ಟ್ನ ಇತ್ತೀಚಿನ ತೀರ್ಪಿನೊಂದಿಗೆ ಸಂಬಂಧಿಸಿದೆ. ಯುಎಪಿಎ ಅಡಿಯಲ್ಲಿ ಬಂಧನವಾದರೆ, ಅದರ ಹಿಂದಿನ ಆಧಾರವನ್ನು ತಕ್ಷಣವೇ ಆರೋಪಿ ಗಳೊಂದಿಗೆ ಹಂಚಿಕೊಳ್ಳಬೇಕು ಎಂದು ಹೇಳಲಾಗಿದೆ.

ವೈದ್ಯಕೀಯ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯೂ ನ್ಯಾಯಾಲಯದಲ್ಲಿ ಬಾಕಿ ಇದೆ ಎಂದು ಸಿಬಲ್ ಹೇಳಿದರು. ದೀಪಾವಳಿ ರಜೆಯ ನಂತರ ವೈದ್ಯಕೀಯ ಜಾಮೀನು ಅರ್ಜಿಯನ್ನು ಮುಖ್ಯ ವಿಷಯದೊಂದಿಗೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ. ಯುಎಪಿಎ ಅಡಿಯಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಪುರಕಾಯಸ್ಥ ಮತ್ತು ಚಕ್ರವರ್ತಿ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಮಧ್ಯಂತರ ಪರಿಹಾರವಾಗಿ ತಕ್ಷಣವೇ ಬಿಡುಗಡೆ ಮಾಡುವಂತೆ ಕೋರಿದ್ದರು.

ಆದರೆ, ಅಕ್ಟೋಬರ್ 13 ರಂದು, ಈ ಪ್ರಕರಣದಲ್ಲಿ ಮಧ್ಯೆ ಪ್ರವೇಶಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್, ಇಬ್ಬರ ಮನವಿಯನ್ನು ವಜಾಗೊಳಿಸಿತ್ತು. ಪ್ರಬೀರ್ ಪುರಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ವಿರೋಧಿಸಿ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅಕ್ಟೋಬರ್ 19ರಂದು (ಬುಧವಾರ) ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿತ್ತು.