Thursday, 12th December 2024

ಒಬಿಸಿ ಮೀಸಲಾತಿ: ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ದೊಡ್ಡ ರಿಲೀಫ್

ನವದೆಹಲಿ: ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ ಕುರಿತ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಯೋಗಿ ಆದಿತ್ಯ ನಾಥ್ ಸರ್ಕಾರಕ್ಕೆ ದೊಡ್ಡ ರಿಲೀಫ್ ದೊರೆತಂತಾಗಿದೆ.
ಒಬಿಸಿ ಮೀಸಲಾತಿ ಕುರಿತ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು ಶೀಘ್ರದಲ್ಲೇ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆ ನೀಡುವುದರ ಜೊತೆಗೆ ಹೊಸ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠವು ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದ ಅಲಿಸಿತು. 2023ರ ಮಾರ್ಚ್ 31ರೊಳಗೆ ಸ್ಥಳೀಯ ಸಂಸ್ಥೆ ಗಳ ಚುನಾವಣೆಗೆ ಒಬಿಸಿ ಮೀಸಲಾತಿಗೆ ಸಂಬಂಧಿಸಿದ ವಿಷಯಗಳನ್ನು ರಾಜ್ಯ ಸರ್ಕಾರ ನೇಮಿಸಿರುವ ಆಯೋಗವು ನಿರ್ಧರಿಸಬೇಕು ಎಂದು ಪೀಠವು ನಿರ್ದೇಶಿಸಿದೆ.

ಅಂತೆಯೇ ಚುನಾಯಿತ ಪ್ರತಿನಿಧಿಗಳ ಅವಧಿ ಮುಗಿದ ನಂತರ ಸ್ಥಳೀಯ ಸಂಸ್ಥೆಗಳ ವ್ಯವಹಾರಗಳನ್ನು ನಡೆಸಲು ಆಡಳಿತ ಗಾರರನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಒಬಿಸಿ ಮೀಸಲಾತಿ ಇಲ್ಲದೆ ತಕ್ಷಣವೇ ಚುನಾವಣೆ ನಡೆಸುವಂತೆ ಈ ಹಿಂದೆ ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿತ್ತು.