Saturday, 23rd November 2024

ಸೂರತ್‌ ಘಟನೆ: ಪ್ರಧಾನಿ, ಸಿಎಂ ರೂಪಾನಿ ಸಂತಾಪ

ನವದೆಹಲಿ: ಗುಜರಾತ್​ನ ಸೂರತ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ, ಗುಜರಾತ್​ ಸಿಎಂ ವಿಜಯ್​ ರೂಪಾನಿ ಸೇರಿ ಇತರರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಸೂರತ್‌ನಲ್ಲಿ ನಡೆದ ಟ್ರಕ್ ಅಪಘಾತದಲ್ಲಿ ಅಷ್ಟು ಮಂದಿ ಪ್ರಾಣ ಕಳೆದುಕೊಂಡಿರುವುದು ನಿಜಕ್ಕೂ ಒಂದು ದುರಂತ. ದುಃಖಿತ ಕುಟುಂಬಗಳಿಗೆ ನನ್ನ ಸಾಂತ್ವನ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಬೇಕೆಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಪಿಎಂ ಮೋದಿ ಹೇಳಿದ್ದಾರೆ.

ಮೃತರ ಸಂಬಂಧಿಗಳಿಗೆ ಪಿಎಂಎನ್‌ಆರ್‌ಎಫ್ (ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ)ಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಕೂಡ ಸಿಎಂ ಪರಿಹಾರ ನಿಧಿಯಿಂದ ಮೃತರ ಸಂಬಂಧಿಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ನೆರವು ನೀಡಿದ್ದಾರೆ.