Saturday, 14th December 2024

ಕೇರಳ, ಲಕ್ಷದ್ವೀಪದಲ್ಲಿ ಭಾರೀ ಮಳೆಯ ಮುನ್ಸೂಚನೆ

ನವದೆಹಲಿ: ಕೇರಳದ ಹಲವಾರು ಭಾಗಗಳಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯು ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.

ಕೇರಳದ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ದಕ್ಷಿಣ ರಾಜ್ಯದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶ ಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಕೊಟ್ಟಾಯಂನಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮುಂಗಾರು ಪೂರ್ವ ಸಿದ್ಧತೆ ಕುರಿತು ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಿದರು. ಸಂಕಷ್ಟದಲ್ಲಿರುವ ಜನರು 1077ಗೆ ಕರೆ ಮಾಡಬಹುದು – ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು 24 ಗಂಟೆಗಳ ವಿಶೇಷ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.