Sunday, 15th December 2024

ಎರಡನೇ ದಿನವೂ ಮುಂದುವರೆದ ಕುಸ್ತಿಪಟುಗಳ ಪ್ರತಿಭಟನೆ

ವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಎರಡನೇ ದಿನವೂ ದೇಶದ ಕುಸ್ತಿಪಟುಗಳ ಪ್ರತಿಭಟನೆ ಮುಂದುವರೆದಿದೆ.

ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಫೆಡರೇಶನ್‌ನ ಮುಖ್ಯಸ್ಥ ಮತ್ತು ಹಲವು ತರಬೇತುದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎರಡನೇ ದಿನವು ಸುಮಾರು 200 ಭಾರತೀಯ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಅವರು ತಮ್ಮ ಫೆಡರೇಶನ್ ಮುಖ್ಯಸ್ಥರು ಮತ್ತು ಇತರ ಹಲವಾರು ತರಬೇತುದಾರರು ಅನೇಕ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಲ್ಲಿ ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರ ತರಬೇತುದಾರರು ತಪ್ಪಿತಸ್ಥರು ಎಂದು ವಿನೇಶ್ ಫೋಗಟ್ ಆರೋಪಿಸಿದ್ದಾರೆ.

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ದೇಶಕ್ಕಾಗಿ ಚಿನ್ನದ ಪದಕ ಗೆದ್ದಿರುವ ವಿನೇಶ್ ಫೋಗಟ್ ಅವರು ಸಾರ್ವಜನಿಕವಾಗಿ ಆರೋಪ ಮಾಡಿದ್ದಾರೆ.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಜಂತರ್ ಮಂತರ್‌ನಲ್ಲಿ ಎರಡನೇ ದಿನವೂ ಮೌನ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.ಬಿಜೆಪಿ ಸಂಸದರೂ ಆಗಿರುವ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಚರಣ್ ಸಿಂಗ್ ಕುಸ್ತಿಪಟುಗಳ ಆರೋಪವನ್ನು ತಳ್ಳಿಹಾಕಿದ್ದಾರೆ.