Friday, 13th December 2024

ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಯನಾಡ್‌: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಸಹೋದರಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರೊಂದಿಗೆ ರಾಹುಲ್ ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ವಯನಾಡ್‌ಗೆ ಬಂದ ರಾಹುಲ್, ನಾಮಪತ್ರ ಸಲ್ಲಿಕೆಗೂ ಮುನ್ನ ಕಲ್‌ಪೆಟ್ಟಾದಿಂದ ಸಿವಿಲ್ ಸ್ಟೇಷನ್‌ವರೆಗೆ ರೋಡ್ ಶೋ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಮುಟ್ಟುವ ಮುನ್ನ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಹಲವರನ್ನು ಬಲಿ ಪಡೆದ ಮಾನವ ಪ್ರಾಣಿ ಸಂಘರ್ಷ ಸೇರಿದಂತೆ ಎಲ್ಲ ಸಮಸ್ಯೆಗಳ ಸಂದರ್ಭದಲ್ಲಿಯೂ ತಾವು ಸದಾ ವಯನಾಡ್ ಜನರೊಂದಿಗೆ ಇರುವುದಾಗಿ ಹೇಳಿದ್ದಾರೆ. ಬೆಟ್ಟಗುಡ್ಡಗಳಿಂದ ಕೂಡಿರುವ ಕ್ಷೇತ್ರದ ಸಮಸ್ಯೆಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟಕ್ಕೆ ಒಯ್ಯುವುದಾಗಿ ಮತದಾರರಿಗೆ ಭರವಸೆ ನೀಡಿದ್ದಾರೆ.

ಹಾಲಿ ವಯನಾಡ್ ಸಂಸದರಾಗಿರುವ ರಾಹುಲ್ ಗಾಂಧಿ ಅವರು ಕ್ಷೇತ್ರದಿಂದ ಪುನರಾಯ್ಕೆ ಬಯಸುತ್ತಿದ್ದು, ಅವರಿಗೆ ವಿರುದ್ಧವಾಗಿ ಬಿಜೆಪಿಯಿಂದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಮತ್ತು ಸಿಪಿಐನಿಂದ ಅನ್ನಿ ರಾಜಾ ಸ್ಪರ್ಧಿಸಿದ್ದಾರೆ.

ತಿರುವನಂತಪುರ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಗೆಲುವಿನ ನಗೆ ಬೀರಿರುವ ಕಾಂಗ್ರೆಸ್‌ನ ಹಿರಿಯ ಮುಖಂಡ ಶಶಿ ತರೂರ್‌ ಅವರು ಈ ಬಾರಿಯೂ ಕಣಕ್ಕಿಳಿಯುತ್ತಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಹೈಕಮಾಂಡ್‌ನ ನೆಚ್ಚಿನ ಅಭ್ಯರ್ಥಿ ತರೂರ್‌ ಅವರು ಕೇರಳದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ವಾಗ್ಮಿ ಮತ್ತು ಲೇಖಕರಾಗಿರುವ ಇವರು ವಿಶ್ವಸಂಸ್ಥೆಯ ಶಾಂತಿಪಾಲಕರಾಗಿಯೂ ಕೆಲಸ ಮಾಡಿದ್ದರು.

ಕೇಂದ್ರದ ಎಲೆಕ್ಟ್ರಾನಿಕ್ಸ್ ಮತ್ತು ಐ.ಟಿ. ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಮೊದಲ ಬಾರಿಗೆ ಶಶಿ ತರೂರ್‌ ವಿರುದ್ಧ ಅಖಾಡಕ್ಕಿಳಿಯುತ್ತಿದ್ದಾರೆ. ಮೂಲತಃ ಕೇರಳದವರಾದರೂ ರಾಜೀವ್‌ ಅವರು ಕರ್ನಾಟಕ ಮತ್ತು ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಛಾಪು ಮೂಡಿಸಿದವರು. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಅವರು ಈ ಹಿಂದೆ ಬಿಜೆಪಿಯ ರಾಷ್ಟ್ರೀಯ ವಕ್ತಾರರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.