ಜೈಪುರ: ಜೈಪುರದಲ್ಲಿ ಭಾನುವಾರ ಸಂಜೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಿವಾಸದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಯ ನಿರ್ಧಾರವನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತೆಗೆದುಕೊಳ್ಳಲಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಭಾನುವಾರ ನಡೆಯಲಿರುವ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ರಾಜಸ್ಥಾನದ ಉಸ್ತುವಾರಿ ಅಜಯ್ ಮಾಕನ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾ ರ್ಜುನ ಖರ್ಗೆ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.
ಸೋನಿಯಾ, ರಾಹುಲ್ ನಾಯಕರು ಸಚಿನ್ ಪೈಲಟ್‌ಗೆ ಸಿಎಂ ಪಟ್ಟ ನೀಡಲು ಒಲವು ತೋರುತ್ತಿದ್ದಾರೆ. ಅಶೋಕ್ ಗೆಹ್ಲೋಟ್ ರಾಜೀನಾಮೆ ನೀಡಿದರೆ ಸಚಿನ್ ಪೈಲಟ್ ಮುಖ್ಯಮಂತ್ರಿ ಸ್ಥಾನದ ಪ್ರಮುಖ ಆಕಾಂಕ್ಷಿ ಎನ್ನಲಾಗಿದೆ. ರಾಜಸ್ಥಾನ ವಿಧಾನಸಭೆ ಸ್ಪೀಕರ್ ಸಿಪಿ ಜೋಶಿ ಹೆಸರೂ ಸುದ್ದಿಯಲ್ಲಿದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ನಡುವೆ ಪೈಪೋಟಿ ಏರ್ಪಟ್ಟಿದೆ.