ಜೈಪುರ: ರಾಜಸ್ಥಾನದ 200 ವಿಧಾನಸಭೆ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ. ಬೆಳಿಗ್ಗೆ 11 ಗಂಟೆಯವರೆಗೆ ಶೇ. 24.74ರಷ್ಟು ರಷ್ಟು ಮತದಾನವಾಗಿದೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಳ್ಳಲು ಹವಣಿಸುತ್ತಿದ್ದರೆ, ಭಾರತೀಯ ಜನತಾ ಪಕ್ಷವು ಅಧಿಕಾರ ವನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿದೆ. ರಾಜ್ಯದ ಒಟ್ಟು 200 ಸ್ಥಾನಗಳ ಪೈಕಿ 199 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಗುರ್ಮೀತ್ ಸಿಂಗ್ ಕೂನಾರ್ ನಿಧನದ ಹಿನ್ನೆಲೆಯಲ್ಲಿ ಕರಣಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.
ಉಭಯ ಪಕ್ಷಗಳು ಭಾರೀ ಪ್ರಚಾರ ನಡೆಸಿದ್ದು, ಇಂದು ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಬಿಜೆಪಿ ಪರ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅಬ್ಬರದ ಪ್ರಚಾರ ಮಾಡಿದ್ದರು.