Thursday, 12th December 2024

ಮೂರನೇ ದಿನವೂ ರಾಗಾಗೆ ಜಾರಿ ನಿರ್ದೇಶನಾಲಯ ವಿಚಾರಣೆ

ನವದೆಹಲಿ: ನ್ಯಾಷನಲ್​​ ಹೆರಾಲ್ಡ್​​ ಪತ್ರಿಕೆ ಖರೀದಿ ಅವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಎದುರು ಸತತ ಮೂರನೇ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾದರು.

ರಾಹುಲ್ ಗಾಂಧಿ ಅವರು ತಮ್ಮ Z+ ವರ್ಗದ ಸಿಆರ್​ಪಿಎಫ್​ ಭದ್ರತಾ ಬೆಂಗಾವ ಲಿನೊಂದಿಗೆ ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿಗೆ ವಿಚಾರಣೆಗ ಹಾಜರಾದರು.

ರಾಹುಲ್ ಗಾಂಧಿ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ ಇತ್ತ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿ ಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ ವಿರುದ್ಧ ಇಡಿ ಕೈಗೊಂಡಿರುವ ಕ್ರಮದ ವಿರುದ್ಧ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿಯವರು, ನಾವೇನು ಭಯೋತ್ಪಾ ದಕರೇ? ಕಾಂಗ್ರೆಸ್ ನಾಯಕರು ಹಾಗೂ ಕಾರ್ಯ ಕರ್ತರನ್ನು ನಿಯಂತ್ರಿಸಲು ಪೊಲೀಸ್ ಬಲ ಏಕೆ ಬಳಕೆ ಮಾಡುತ್ತಿದ್ದಾರೆ? ಎಂದು ಕಿಡಿಕಾರಿದರು.

ಕೇಂದ್ರ ದೆಹಲಿಯ ಅಕ್ಬರ್ ರಸ್ತೆಯಲ್ಲಿ ಇರುವ ಕಾಂಗ್ರೆಸ್ ಕಚೇರಿ ಎದುರು ಭಾರೀ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರು ಸೇರಿ ದ್ದಾರೆ. ಈ ನಡುವೆ ಪೊಲೀಸರು ಪ್ರತಿಭಟನಾ ನಿರತ ಹಲವು ನಾಯಕರನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆಯುವಾಗ ಹಲವರು ರಾಹುಲ್ ಗಾಂಧಿ ಜಿಂದಾಬಾದ್ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಂಗಳವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಹುಲ್ ಗಾಂಧಿಯವರನ್ನು 11 ಗಂಟೆಗಳ ಕಾಲ ವಿಚಾರಣೆ ನಡೆಸಿ, ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದರು. ವಿಚಾರಣೆ ಅಪೂರ್ಣಗೊಂಡ ಹಿನ್ನೆಲೆಯಲ್ಲಿ ಬುಧವಾರ ಮತ್ತೆ ವಿಚಾರಣೆಗೆ ಹಾಜರಾಗು ವಂತೆ ಸೂಚಿಸಿದ್ದರು.