Tuesday, 10th December 2024

Shrikant Pangarkar: ಗೌರಿ ಲಂಕೇಶ್‌ ಹತ್ಯೆ ಪ್ರಮುಖ ಆರೋಪಿ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆ

gauri lankesh

ಜಲ್ನಾ: 2017ರಲ್ಲಿ ಇಡೀ ದೇಶದ ಗಮನ ಸೆಳೆದಿದ್ದ ಪತ್ರಕರ್ತೆ ಗೌರಿ ಲಂಕೇಶ್(Gauri Lankesh) ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗರ್ಕರ್(Shrikant Pangarkar), ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ(Eknath Shinde-Led Sena) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗೆ ಮುನ್ನ ಜಲ್ನಾದಲ್ಲಿ ಇಂದು ಪಂಗರ್ಕರ್‌ ಪಕ್ಷಕ್ಕೆ ಸೇರಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 5, 2017 ರಂದು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಅವರ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮಹಾರಾಷ್ಟ್ರದ ಏಜೆನ್ಸಿಗಳ ಸಹಾಯದಿಂದ ಕರ್ನಾಟಕದಲ್ಲಿ ಪೊಲೀಸರು ನಡೆಸಿದ ತನಿಖೆ ಹಲವರನ್ನು ಬಂಧಿಸಲು ಕಾರಣವಾಯಿತು. 2001 ಮತ್ತು 2006 ರ ನಡುವೆ ಅವಿಭಜಿತ ಶಿವಸೇನೆಯ ಜಲ್ನಾ ಪುರಸಭೆಯ ಕೌನ್ಸಿಲರ್ ಪಂಗರ್ಕರ್ ಅವರನ್ನು ಆಗಸ್ಟ್ 2018 ರಲ್ಲಿ ಬಂಧಿಸಲಾಯಿತು. ಈ ವರ್ಷ ಸೆಪ್ಟೆಂಬರ್ 4 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು.

2011 ರಲ್ಲಿ ಶಿವಸೇನೆಯಿಂದ ಟಿಕೆಟ್ ನಿರಾಕರಿಸಿದ ನಂತರ, ಪಂಗರ್ಕರ್ ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಗೆ ಸೇರ್ಪಡೆಗೊಂಡಿದ್ದರು. ಅವರು ಶುಕ್ರವಾರ ಪಕ್ಷದ ನಾಯಕ ಮತ್ತು ಮಾಜಿ ರಾಜ್ಯ ಸಚಿವ ಅರ್ಜುನ್ ಖೋಟ್ಕರ್ ಅವರ ಸಮ್ಮುಖದಲ್ಲಿ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದರು. ಮಾಜಿ ಶಿವಸೈನಿಕರು ಆಗಿರುವ ಪಂಗಾರ್ಕರ್ ಅವರು ಪಕ್ಷಕ್ಕೆ ಮರಳಿದ್ದಾರೆ. ಅವರನ್ನು ಜಲ್ನಾ ವಿಧಾನಸಭಾ ಚುನಾವಣಾ ಪ್ರಚಾರದ ಮುಖ್ಯಸ್ಥರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಖೋಟ್ಕರ್ ಸುದ್ದಿಗಾರರಿಗೆ ತಿಳಿಸಿದರು.

ಖೋಟ್ಕರ್ ಅವರು ಜಲ್ನಾದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವುದಾಗಿ ಹೇಳಿದರು, ಆದರೆ ಮಹಾಯುತಿಯಲ್ಲಿ (ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡಿರುವ ಆಡಳಿತ ಮೈತ್ರಿ) ಸೀಟು ಹಂಚಿಕೆ ಚರ್ಚೆಗಳು ಇನ್ನೂ ನಡೆಯುತ್ತಿವೆ. ಈ ಸ್ಥಾನವನ್ನು ಕಾಂಗ್ರೆಸ್‌ನ ಕೈಲಾಶ್ ಗೊರಂಟ್ಯಾಲ್ ಹೊಂದಿದ್ದಾರೆ. ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಪ್ರಸ್ತುತ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಳ್ಳುತ್ತದೆ.

ಈ ಸುದ್ದಿಯನ್ನೂ ಓದಿ: Election Commission: ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆಗೆ ಮುಹೂರ್ತ ಫಿಕ್ಸ್‌; ಇಲ್ಲಿದೆ ಡಿಟೇಲ್ಸ್‌