ಹೈದರಾಬಾದ್: ಮೂಳೆ ಜೋಡಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಶುಕ್ರವಾರ ಆಸ್ಪತ್ರೆ ಯಿಂದ ಬಿಡುಗಡೆಗೊಂಡಿದ್ದಾರೆ.
ಕೆಸಿಆರ್ ಆಸ್ಪತ್ರೆಯಿಂದ ನಂದಿನಗರದಲ್ಲಿರುವ ತಮ್ಮ ನಿವಾಸಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಆರ್‌ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ ಡಿ.8 ರಂದು ತಮ್ಮ ಎರ್ರವಲ್ಲಿ ಫಾರ್ಮ್ ಹೌಸ್‌ನಲ್ಲಿ ಬಿದ್ದು ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಕೆಸಿಆರ್ ಅವರನ್ನು ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ನಮ್ಮ ತಂದೆ ಇಂದು ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದಾರೆ ಎಂದು ಕೆಸಿಆರ್ ಪುತ್ರಿ ಕೆ.ಕವಿತಾ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದ್ದಾರೆ. ಕೆಸಿಆರ್ ಅವರು ಆರರಿಂದ ಎಂಟು ವಾರಗಳಲ್ಲಿ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಆಸ್ಪತ್ರೆಯ ಅಧಿಕಾರಿ ಗಳು ತಿಳಿಸಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಟಿಡಿಪಿ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು, ಸೂಪರ್ ಸ್ಟಾರ್ ಚಿರಂಜೀವಿ ಮತ್ತು ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ನಾಯಕರು ಹಾಗೂ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಕೆಸಿಆರ್ ಆರೋಗ್ಯ ವಿಚಾರಿಸಿದ್ದರು.