Wednesday, 11th December 2024

ಡಿಸೆಂಬರ್ 4 ರಂದು ಸಂಸತ್ತಿನ ಚಳಿಗಾಲದ ಅಧಿವೇಶನ, ಡಿಸೆಂಬರ್ 2ರಂದು ಸರ್ವಪಕ್ಷ ಸಭೆ

ನವದೆಹಲಿ: ಡಿಸೆಂಬರ್ 4 ರಂದು ಪ್ರಾರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಸರ್ಕಾರವು ಡಿಸೆಂಬರ್ 2ರಂದು ಸರ್ವಪಕ್ಷ ಸಭೆ ಕರೆದಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 22ರಂದು ಮುಕ್ತಾಯಗೊಳ್ಳಲಿದೆ. ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಡಿಸೆಂಬರ್ 2 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಸರ್ವಪಕ್ಷಗಳ ಸಭೆಯನ್ನು ಸಾಮಾನ್ಯವಾಗಿ ಅಧಿವೇಶನ ಪ್ರಾರಂಭವಾಗುವ ಒಂದು ದಿನದ ಮೊದಲು ಕರೆಯಲಾಗುತ್ತಿತ್ತು. ಆದರೆ, ಈ ಬಾರಿ ಪಂಚ ರಾಜ್ಯಗಳ ಚುನಾವಣಾ ಮತ ಎಣಿಕೆ ಡಿಸೆಂಬರ್ 3ರಂದು ನಡೆಯುತ್ತಿರುವುದರಿಂದ ಡಿಸೆಂಬರ್ 2ರಂದೇ ಸರ್ವಪಕ್ಷ ಸಭೆ ಕರೆಯಲಾಗಿದೆ.

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಮಿಜೋರಾಂ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ (ಡಿ. 4) ಚಳಿಗಾಲದ ಅಧಿವೇಶನ ನಡೆಯಲಿದೆ.