Sunday, 15th December 2024

ಸರ್ಕಾರವು ಸಂಸದ ಬ್ರಿಜ್ ಭೂಷಣ್ ರಕ್ಷಣೆ ಮಾಡುವ ಕೆಲಸ ಏಕೆ ಮಾಡುತ್ತಿದೆ?

ನವದೆಹಲಿ: ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಲವಾರು ಅಥ್ಲೀಟ್ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಶನಿವಾರ ಭೇಟಿ ಮಾಡಿದರು.
ದೆಹಲಿಯ ಜಂತರ್ ಮಂತರ್’ಗೆ ಭೇಟಿ ನೀಡಿದ ಪ್ರಿಯಾಂಕಾ ಗಾಂಧಿಯವರು ಪ್ರತಿಭಟನಾ ನಿರತ ಕುಸ್ತಿಪಟುಗಳ ಭೇಟಿ ಮಾಡಿ, ಮಾತುಕತೆ ನಡೆಸಿದರು. ಕುಸ್ತಿಪಟುಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿಯವರು, ಪ್ರಧಾನಿ ಮೋದಿಯವರಿಂದ ನನಗೆ ಯಾವುದೇ ನಿರೀಕ್ಷೆ ಇಲ್ಲ, ಏಕೆಂದರೆ ಅವರು ಈ ಕುಸ್ತಿಪಟುಗಳ ಬಗ್ಗೆ ಚಿಂತೆ ಮಾಡಿರುವುದೇ ಆದರೆ, ಅವರೇಕೆ ಇನ್ನೂ ಕುಸ್ತಿಪಟುಗಳನ್ನು ಭೇಟಿ ಮಾಡಿಲ್ಲ, ಮಾತುಕತೆ ನಡೆಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಇಡೀ ದೇಶ ನಿಂತಿದೆ. ಕುಸ್ತಿಪಟುಗಳು ಇದರ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ನನಗೆ ತುಂಬಾ ಹೆಮ್ಮೆ ಇದೆ ಎಂದು ಹೇಳಿದ್ದಾರೆ.
ಎಫ್‌ಐಆರ್’ನ್ನೇಕೆ ಪೊಲೀಸರು ತೋರಿಸುತ್ತಿಲ್ಲ? ಈ ಕುಸ್ತಿಪಟುಗಳು ಪದಕಗಳನ್ನು ಗೆದ್ದಾಗ ನಾವೆಲ್ಲರೂ ಟ್ವೀಟ್ ಮಾಡಿ ಹೆಮ್ಮೆ ಪಡುತ್ತೇವೆ. ಈ ಎಲ್ಲಾ ಮಹಿಳಾ ಕುಸ್ತಿಪಟುಗಳು ಈ ಹಂತಕ್ಕೆ ಬರಲು ಸಾಕಷ್ಟು ಕಷ್ಟಪಡುತ್ತಾರೆ. ಸರ್ಕಾರವು ಸಂಸದನ್ನೇಕೆ (ಬ್ರಿಜ್ ಭೂಷಣ್ ಶರಣ್ ಸಿಂಗ್) ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.