ಲಖನೌ, ಜ. 3: ಆರು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ (Uttar Pradesh) ಬುಲಂದ್‌ಶಹರ್‌ನಲ್ಲಿ ನಡೆದಿದೆ. ಹಲ್ಲೆಯ ನಂತರ ಆರೋಪಿಗಳು ತಮ್ಮ ಗುರುತನ್ನು ಮರೆಮಾಡಲು ಮಗುವನ್ನು ಟೆರೇಸ್‍ನಿಂದ ಎಸೆದಿದ್ದಾರೆ (Crime News).
ಜನವರಿ 2ರ ತಡರಾತ್ರಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯೊಬ್ಬಳು ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂಬ ಮಾಹಿತಿ ಬಂದಿದ್ದು, ಆಕೆಯನ್ನು ಸಿಕಂದರಾಬಾದ್‌ನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ಬಾಲಕಿಯ ತಂದೆಯ ದೂರಿನ ಮೇರೆಗೆ, ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 70(2) ಮತ್ತು 103(1) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 5(ಎಂ) ಮತ್ತು 6ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಯುವತಿಗೆ ಮೆಸೇಜ್ ಮಾಡಿ ಕಿರುಕುಳ, ಯುವಕನ ಹತ್ಯೆ
ರಾಜು ಮತ್ತು ವೀರು ಕಶ್ಯಪ್ ಎಂಬ ಇಬ್ಬರು ಯುವಕರು ಒಂದೇ ಕಟ್ಟಡದಲ್ಲಿ ಬಾಡಿಗೆದಾರರಾಗಿ ವಾಸಿಸುತ್ತಿದ್ದಾರೆ ಎಂದು ಬಾಲಕಿಯ ತಂದೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ತನ್ನ ಮಗಳು ಟೆರೇಸ್‍ನಲ್ಲಿ ಆಟವಾಡುತ್ತಿದ್ದಳು. ನಂತರ ಕಟ್ಟಡದ ಹಿಂದಿನ ಹೊಲದಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು. ಇಬ್ಬರು ಯುವಕರು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಂತರ ಅವಳನ್ನು ಕೊಂದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಅರಿತ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ, ಆರೋಪಿಗಳನ್ನು ಬಂಧಿಸಲು ಮೂರು ತಂಡಗಳನ್ನು ರಚಿಸಿದರು. ನಂತರ ಶಂಕಿತರು ನಿರ್ಮಾಣ ಹಂತದ ಕಾಲೋನಿಯ ಆವರಣವೊಂದರಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತು.
ಸಿಕಂದರಾಬಾದ್ ಪೊಲೀಸ್ ತಂಡ ಆ ಪ್ರದೇಶವನ್ನು ಸುತ್ತುವರಿದಾಗ, ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದರು ಎಂದು ಹೇಳಲಾಗಿದೆ. ಪೊಲೀಸರು ಪ್ರತಿದಾಳಿ ನಡೆಸಿದಾಗ, ರಾಜು ಮತ್ತು ವೀರು ಕಶ್ಯಪ್ ಅವರ ಕಾಲುಗಳಿಗೆ ಗಾಯವಾಯಿತು. ಗಾಯಗೊಂಡ ಸ್ಥಿತಿಯಲ್ಲಿದ್ದ ಅವರನ್ನು ಪೊಲೀಸರು ಬಂಧಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರು.
ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ, ಆರೋಪಿಗಳು ಅಪರಾಧದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಸಂತ್ರಸ್ತೆ ಗಂಭೀರ
ಪ್ರತ್ಯೇಕ ಪ್ರಕರಣವೊಂದರಲ್ಲಿ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ವರದಿಗಳ ಪ್ರಕಾರ, ಆಕೆಯ ತಲೆ ಮತ್ತು ಮುಖಕ್ಕೆ ಹಲವು ಗಾಯಗಳಾಗಿದ್ದು, ಕನಿಷ್ಠ 12 ಹೊಲಿಗೆ ಹಾಕಲಾಗಿದೆ. ಆರೋಪಿಗಳು ಕಾರಿನಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕ್ರೂರವಾಗಿ ಹಲ್ಲೆ ನಡೆಸಿದರು. ನಂತರ ಚಲಿಸುತ್ತಿದ್ದ ಕಾರಿನಿಂದ ಹೊರಗೆ ಎಸೆದರು. ಮಂಗಳವಾರ ಮುಂಜಾನೆ ನಿರ್ಜನ ಗುರುಗ್ರಾಮ್-ಫರಿದಾಬಾದ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ.
ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದ್ದು, ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ ಎಂದು ಹೇಳಲಾಗುತ್ತಿದೆ. ಉತ್ತರ ಪ್ರದೇಶದ ಮತ್ತು ಮಧ್ಯ ಪ್ರದೇಶದ ಇಬ್ಬರು ಆರೋಪಿಗಳನ್ನು ಬುಧವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.