ಬೆಂಗಳೂರು: ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮಹಿಳೆಯರು ಸ್ಥಳದಲ್ಲಿಯೇ (Road Accident) ಮೃತಪಟ್ಟಿದ್ದಾರೆ. ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತರು. ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಅಪಘಾತದಲ್ಲಿ ಗಾಯಗಳಾಗಿವೆ. ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಟಿಟಿಯಲ್ಲಿದ್ದವರೆಲ್ಲರು ಕಾಶಿ ಪ್ರವಾಸಕ್ಕೆ ತೆರಳಲು ಏರ್‌ಪೋರ್ಟ್‌ಗೆ ಹೋಗುತ್ತಿದ್ದರು. ತಿಪಟೂರಿನಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಟಿಟಿ ವಾಹನದ ಮೂಲಕ ರಾತ್ರಿ 10 ಗಂಟೆ ಸುಮಾರಿಗೆ ಹೊರಟಿದ್ದರು. ಏರ್ಪೋರ್ಟ್ನ ಟರ್ಮಿನಲ್ ದಾರಿಯ ಬಗ್ಗೆ ಸರಿಯಾಗಿ ತಿಳಿದಿರದ ಕಾರಣ ಗೂಗಲ್ ಮ್ಯಾಪ್ ಹಾಕಿಕೊಂಡು ಟಿಟಿ ಚಾಲಕ ವಾಹನ ಚಾಲನೆ ಮಾಡುತ್ತಿದ್ದ. ಅಪಘಾತ ನಡೆದ ಸ್ಥಳಕ್ಕೂ ಹಿಂದೆಯೇ ಸರ್ವೀಸ್ ರಸ್ತೆಗೆ ಮೊದಲ ಟರ್ನಿಂಗ್ ಇತ್ತು. ಆದರೆ ಅದು ಗೊತ್ತಾಗದೆ ಮುಂದೆ ಪಾಸ್ ಆಗಿದ್ದ ಟಿಟಿ ವಾಹನ ಮುಂದಿನ ಟರ್ನಿಂಗ್ನಲ್ಲಿ ಯೂಟರ್ನ್ ಪಡೆಯುವ ವೇಳೆ ಲಾರಿ ಟಿಟಿಗೆ ಡಿಕ್ಕಿಯಾಗಿದೆ.
ಪ್ರತ್ಯೇಕ ಘಟನೆಯಲ್ಲಿ, ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.ಬೆಟ್ಟಕೋಟೆ ನಿವಾಸಿ ವೆಂಕಟೇಗೌಡ (45) ಎಂಬುವವರು ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ. ಬೆಟ್ಟಕೋಟೆ ಗ್ರಾಮದ ಬಳಿ ಅತಿವೇಗವಾಗಿ ಬಂದ ಕಾರು ಮೊದಲು ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಕಾರು, ಮುಂದೆ ಚಲಿಸುತ್ತಿದ್ದ ವೆಂಕಟೇಗೌಡ ಅವರ ಬೈಕ್‌ಗೆ ಗುದ್ದಿದೆ. ಡಿಕ್ಕಿಯ ತೀವ್ರತೆಗೆ ವೆಂಕಟೇಗೌಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.