ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಸ್ಸಾಂನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿಯ ಬಂಧನ, ಪೊಲೀಸರ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಅಸ್ಸಾಂನ ಶ್ರೀಭೂಮಿಯಲ್ಲಿ 8 ವರ್ಷದ ಬಾಲಕಿಯನ್ನು ಆಮಿಷವೊಡ್ಡಿ ಅರಣ್ಯಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ. 22 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಘಟನೆಯ ವೇಳೆ ಪೊಲೀಸರ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಅಸ್ಸಾಂನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ

ಆರೋಪಿಯನ್ನು ಹಿಡಿದುಕೊಟ್ಟ ಸ್ಥಳೀಯರು -

Profile
Sushmitha Jain Jul 9, 2026 3:53 PM

ದಿಸ್ಪುರ್ ಜುಲೈ 9: ಅಸ್ಸಾಂ ರಾಜ್ಯದ ಶ್ರೀಭೂಮಿ (Sribhumi) ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ (Physical Assult) ಎಸಗಿ ಬಳಿಕ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 22 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದು, ಘಟನೆಯ ನಂತರ ಸ್ಥಳೀಯರು ಪೊಲೀಸರ ವಿರುದ್ಧವೂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ಬೆಳಗ್ಗೆ ಆರೋಪಿಯು ಬಾಲಕಿಯನ್ನು ಆಮಿಷವೊಡ್ಡಿ ಮನೆ ಸಮೀಪದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಬೆಳಗ್ಗೆ ಸುಮಾರು 10 ಗಂಟೆಯಿಂದ ಬಾಲಕಿ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಹುಡುಕಾಟ ಆರಂಭಿಸಿದರು.

ಕೆಲವೇ ಗಂಟೆಗಳ ಬಳಿಕ ಮನೆಯ ಸಮೀಪದ ಅರಣ್ಯದ ಗುಡ್ಡ ಪ್ರದೇಶದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಯಿತು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು.

ಶ್ರೀಭೂಮಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ASP) ತ್ರಿನಯನ್ ಭುಯಾನ್ ಮಾತನಾಡಿ, "ಪ್ರಾಥಮಿಕ ತನಿಖೆಯಲ್ಲಿ ಬಾಲಕಿಯನ್ನು ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿರುವುದು ಕಂಡುಬಂದಿದೆ. ಆರೋಪಿಯನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಯುತ್ತಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.

Crime News: ಅನುಕಂಪದ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳಲು ತಾಯಿಯನ್ನೇ ಕೊಂದ ಪಾಪಿ ಮಗಳು; ಸಹೋದರನ ಸಣ್ಣ ಅನುಮಾನದಿಂದ ಬೆಳಕಿಗೆ ಬಂತು ಭಯಾನಕ ಸಂಚು

ಘಟನೆಯ ಬಳಿಕ ಸ್ಥಳೀಯರು ಆರೋಪಿಯನ್ನು ಪತ್ತೆಹಚ್ಚಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ, ಘಟನೆ ನಡೆದ ಸ್ಥಳದಿಂದ ಸುಮಾರು 300 ಮೀಟರ್ ದೂರದಲ್ಲಿದ್ದ ಮದನಮೋಹನ್ ಪೆಟ್ರೋಲ್ ಪೋಸ್ಟ್‌ಗೆ ಮಾಹಿತಿ ನೀಡಿದರೂ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ನಿವಾಸಿಗಳು ಚಾರ್ಗೋಲಾ–ಹೈಲಾಕಾಂಡಿ ಸಂಪರ್ಕ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ಆರೋಪಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆ ವಿಧಿಸುವಂತೆ ಹಾಗೂ ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಜಿಲ್ಲಾ ಕೇಂದ್ರದಿಂದ ಹೆಚ್ಚುವರಿ ಪೊಲೀಸ್ ಪಡೆ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿತು.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಮದನಮೋಹನ್ ಪೆಟ್ರೋಲ್ ಪೋಸ್ಟ್‌ನ ಉಸ್ತುವಾರಿ ಅಧಿಕಾರಿ ಮೋಹನ್ ಲಾಲ್ ದಾಸ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ, ಅವರ ವಿರುದ್ಧ ಇಲಾಖಾ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವೈಜ್ಞಾನಿಕ ಹಾಗೂ ಕಾನೂನು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ವರದಿ ಬಂದ ಬಳಿಕ ಪ್ರಕರಣದ ಮುಂದಿನ ತನಿಖೆ ಮತ್ತಷ್ಟು ವೇಗ ಪಡೆಯುವ ಸಾಧ್ಯತೆ ಇದೆ.