ಬೆಂಗಳೂರು: ಪಾರ್ಸೆಲ್ ನೀಡಲು ಬಂದ ಡೆಲಿವರಿ ಏಜೆಂಟ್ ಓರ್ವ ಶೌಚಾಲಯ ಬಳಸುವ ನೆಪದಲ್ಲಿ ಮಹಿಳೆಯೊಬ್ಬರ (harassment case) ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಪಾರ್ಸೆಲ್ ನೀಡಲು ಬಂದ ಇ-ಕಾಮರ್ಸ್ ಸಂಸ್ಥೆಯೊಂದರ ಡೆಲಿವರಿ ಏಜೆಂಟ್, ಶೌಚಾಲಯ ಬಳಸುವ (Flipkart) ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಮಹಿಳೆ ಸಾಮಾಜಿಕ ಜಾಲತಾಣದ ಮೂಲಕ ತಮಗಾದ ಭೀಕರ ಅನುಭವವನ್ನು ಹಂಚಿಕೊಂಡಿದ್ದಾರೆ. ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಲ್ಲದೆ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಸಾಕಷ್ಟು ಪ್ರಶ್ನೆ ಮೂಡಿಸಿದೆ. ಶೌಚಾಲಯಕ್ಕೆ ಹೋದ ಆತ, ಅಲ್ಲಿಂದ ಹೊರಬಂದ ಬಳಿಕ ಮಹಿಳೆಯ ಎದುರು ಅತ್ಯಂತ ಅಸಭ್ಯವಾಗಿ ನಡೆದುಕೊಂಡಿದ್ದಾನೆ ಹಾಗೂ ವಿಕೃತವಾಗಿ ವರ್ತಿಸಿದ್ದಾನೆ. ಡೆಲಿವರಿ ಬಾಯ್‌ನ ಅಸಭ್ಯ ವರ್ತನೆಯಿಂದ ಮಹಿಳೆ ಬೆಚ್ಚಿ ಬಿದ್ದಿದ್ದಾಳೆ.
ಮಹಿಳೆ ತನಗೆದುರಾದ ಭಯಾನಕ ಕ್ಷಣವನ್ನು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲದೆ ಆತನನ್ನು ಪ್ರಶ್ನಿಸಿ ಪೊಲೀಸ್ ದೂರು ನೀಡುವುದಾಗಿ ಹೇಳಿದ್ದಾಳೆ. ಈ ವೇಳೆ ಡೆಲಿವರಿ ಬಾಯ್ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಬೆಂಗಳೂರು ನಗರ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಮಹಿಳೆಯಿಂದ ಅಗತ್ಯ ವಿವರಗಳನ್ನು ಪಡೆದುಕೊಂಡು, ಆರೋಪಿ ಡೆಲಿವರಿ ಏಜೆಂಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಈಗಾಗಲೇ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ದೂರಿನ ಆಧಾರದ ಮೇಲೆ ಫ್ಲಿಪ್‌ಕಾರ್ಟ್ ಡೆಲಿವರಿ ಏಜೆಂಟ್ ವಿಜಯ್ ಮಲ್ಲಿಕಾರ್ಜುನ ಕಾಮತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 345/2026 ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 75, 79 ಹಾಗೂ 329(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಆರಂಭಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.
ಫ್ಲಿಪ್‌ಕಾರ್ಟ್ ಭರವಸೆ
ಇ-ಕಾಮರ್ಸ್ ಸಂಸ್ಥೆಯಾದ ಫ್ಲಿಪ್‌ಕಾರ್ಟ್ ಕೂಡ ಈ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದು, ನಮ್ಮ ಸಿಬ್ಬಂದಿಯ ಇಂತಹ ನಡವಳಿಕೆಯನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಈ ಬಗ್ಗೆ ಆಂತರಿಕ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದೆ.