ಬೆಂಗಳೂರು: ರಾಜಧಾನಿಯಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿ, 5.15 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ (Drugs seize) ಪಡೆದಿದ್ದಾರೆ. ಎಂಡಿಎಂಎ ಮತ್ತು ಎಕ್ಸ್ಟಸಿ ಮಾತ್ರೆಗಳ ಮಾರಾಟ ಜಾಲವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.
ಖಚಿತ ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು, ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮುನೆಕೊಳಲು ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ಮಾರಾಟ ಮಾಡುತ್ತಿದ್ದ ಅರ್ನೆಸ್ಟ್ ಒನ್ಯೆಕಾಚಿ ಉಗಾ (45) ಎಂಬ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯ ಸಮಯದಲ್ಲಿ, ಪೊಲೀಸರು ಆರೋಪಿಯಿಂದ 2.5 ಕೆಜಿ ಎಂಡಿಎಂಎ ಮತ್ತು 300 ಎಕ್ಸ್ಟಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಮೌಲ್ಯ ಸುಮಾರು 5.15 ಕೋಟಿ ಎಂದು ಅಂದಾಜಿಸಲಾಗಿದೆ.
ಆರೋಪಿ ಮೇಲೆ ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿ ಎರಡು ಕ್ರಿಮಿನಲ್ ಪ್ರಕರಣಗಳು ಇರುವುದು ಬೆಳಕಿಗೆ ಬಂದಿದ್ದು, ಹೆಣ್ಣೂರು ಪೊಲೀಸ್ ಠಾಣೆ ಮತ್ತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿತ್ತು. ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿ, ಮತ್ತೆ ಅಕ್ರಮ ಚಟುವಟಿಕೆಗಳನ್ನು ಆರಂಭಿಸಿದ್ದ. ಆತನ ಚಲನವಲನಗಳ ಮೇಲೆ ನಿಗಾ ಇರಿಸಿದ್ದ ಸಿಸಿಬಿ ಎಎನ್‌ಡಬ್ಲ್ಯು ಅಧಿಕಾರಿಗಳು, ಮತ್ತೆ ಕಳ್ಳಸಾಗಣೆ ಚಟುವಟಿಕೆಗಳಲ್ಲಿ ತೊಡಗಿದ್ದಾಗ ಆತನನ್ನು ವಶಕ್ಕೆ ಪಡೆದಿದ್ದಾರೆ.
NDPS ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕಳ್ಳಸಾಗಣೆ ವಸ್ತುಗಳ ಮೂಲವನ್ನು ಪತ್ತೆಹಚ್ಚಲು ಮತ್ತು ದಂಧೆಯಲ್ಲಿ ಭಾಗಿಯಾಗಿರುವ ಇತರ ಸಹಚರರನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ.
ಡ್ರಗ್ಸ್ ದಂಧೆ ಹೆಚ್ಚಳ; ಗೃಹ ಸಚಿವ, ಸಿಎಂ ರಾಜೀನಾಮೆಗೆ ಸಿ.ಎನ್. ಅಶ್ವತ್ಥ್ ನಾರಾಯಣ ಆಗ್ರಹ
ಸಹಾಯಕ ಪೊಲೀಸ್ ಆಯುಕ್ತ ಮಹಾನಂದ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಶಿವರಾಜ್ ಮತ್ತು ಸಿಬ್ಬಂದಿ ನೇತೃತ್ವದಲ್ಲಿ, ಹೆಚ್ಚುವರಿ ಪೊಲೀಸ್ ಆಯುಕ್ತ ಅಜಯ್ ಹಿಲೋರಿ, ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಮತ್ತು ಡಿಸಿಪಿ (ಕ್ರೈಮ್ -2) ರಾಜಾ ಇಮಾಮ್ ಕಾಸಿಮ್ ಅವರ ಮೇಲ್ವಿಚಾರಣೆಯಲ್ಲಿ ತನಿಖಾ ತಂಡವು ಈ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದೆ.