ಉಡುಪಿ: ಧರ್ಮಸ್ಥಳದ (Dharmasthala) ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ ಶೆಟ್ಟಿ ತಿಮರೋಡಿ ಎಂಬಾತನ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (BL santosh) ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿರುವ ಕುರಿತು ದೂರು ಸಲ್ಲಿಸಲಾಗಿದೆ. ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಅವರು ದೂರು ನೀಡಿದ್ದಾರೆ.
ಆಗಸ್ಟ್ 16ರಂದು ಫೇಸ್‌ಬುಕ್ ಪೇಜ್‌ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಅವರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಧರ್ಮಸ್ಥಳದಲ್ಲಿ ಶೋಧಕಾರ್ಯ ಸ್ಥಗಿತ: ಜಿ. ಪರಮೇಶ್ವರ
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ (Dharmasthala case) ಸಂಬಂಧಿಸಿ ಎಸ್‌ಐಟಿ ತನಿಖೆಯ ಕುರಿತ ಮಧ್ಯಂತರ ವರದಿ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ ಹಿನ್ನೆಲೆಯಲ್ಲಿ ಸದನದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಪ್ರಕರಣದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಶೋಧ ಕಾರ್ಯ ನಡೆದಿರುವ ಕಡೆ ಸಿಕ್ಕಿರುವ ಅಸ್ಥಿಪಂಜರ, ಮೂಳೆಗಳು ಸೇರಿ ಇತರ ವಸ್ತುಗಳನ್ನು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಹೀಗಾಗಿ ಎಫ್ಎಸ್ಎಲ್ನಿಂದ ವರದಿ ಬರುವವರೆಗೆ ತಾತ್ಕಾಲಿಕವಾಗಿ ಶೋಧಕಾರ್ಯ ಸ್ಥಗಿತ ಮಾಡಲು ಎಸ್‌ಐಟಿ ನಿರ್ಧಾರ ಮಾಡಿದೆ. ವರದಿ ಬಂದ ಬಳಿಕ ತನಿಖೆ ಮುಂದುವರಿಯುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ಕೊಲೆಯಾದ ಅನೇಕ ಯುವತಿ, ಮಹಿಳೆ, ಪುರುಷರ ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ದೂರುದಾರ ಹೇಳಿದ್ದ. ಇದಕ್ಕೆ ಸಂಬಂಧಿಸಿ ಜುಲೈ 4 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮ್ಯಾಜಿಸ್ಟ್ರೇಟ್ ಕೋರ್ಟ್ ಸೂಚನೆ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದರು.
ಈ ನಡುವೆ ರಾಜ್ಯದ ಮಹಿಳಾ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆಯುತ್ತಾರೆ. ಹೀಗಾಗಿ ತನಿಖೆ ಮಾಡಲು ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಯಿತು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Dharmasthala Case: ಆ.28ರಂದು ʼನ್ಯಾಯವಾದಿಗಳ ನಡೆ ಧರ್ಮಸ್ಥಳದ ಕಡೆʼ ಜಾಥಾ