ಬೆಂಗಳೂರು: ಕುಡಿದ ಮತ್ತಿನಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನೇ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಕೋ ಲೇಔಟ್ (Muder Case) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಗೌರಮ್ಮ (45) ಎಂದು ಗುರುತಿಸಲಾಗಿದೆ. ಆರೋಪಿ ಪತಿ ನಾಗರಾಜ್ ಕೃತ್ಯ ಎಸಗಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೂಲತಃ ಜಗಳೂರು ತಾಲ್ಲೂಕಿನ ಈ ದಂಪತಿಗಳು ಕೆಲಸಕ್ಕೆಂದು ಬೆಂಗಳೂರಿಗೆ ಬಂದು ನೆಲೆಸಿದ್ದರು.
ನಾಗರಾಜ್ ಖಾಸಗಿ ಸಂಸ್ಥೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇವರಿಗೆ ಮೂವರು ಮಕ್ಕಳಿದ್ದು, ಅವರು ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ, ನಿನ್ನೆ ರಾತ್ರಿ ಕುಡಿದು ಮನೆಗೆ ಬಂದಿದ್ದ ನಾಗರಾಜ್ ಮತ್ತು ಗೌರಮ್ಮ ನಡುವೆ ತೀವ್ರ ಜಗಳ ನಡೆದಿದೆ. ಈ ವೇಳೆ ಆಕ್ರೋಶಗೊಂಡ ನಾಗರಾಜ್, ಪತ್ನಿಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ಗಂಡ-ಹೆಂಡತಿಯ ನಡುವೆ ಕೆಲಕಾಲದಿಂದಲೇ ಗಲಾಟೆಗಳು ನಡೆಯುತ್ತಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ವಿಶೇಷವಾಗಿ ನಾಗರಾಜ್ ಪ್ರತಿದಿನವೂ ಮದ್ಯಪಾನ ಮಾಡಿ ಮನೆಗೆ ಬಂದು ಜಗಳ ಮಾಡುತ್ತಿದ್ದನು ಎನ್ನಲಾಗಿದೆ. ಇದೇ ವಿಚಾರವಾಗಿ ಕುಟುಂಬದಲ್ಲಿ ಆಗಾಗ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ಹೇಳಲಾಗಿದೆ.
ನಿನ್ನೆ ರಾತ್ರಿ ಕೂಡ ನಾಗರಾಜ್ ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ಮನೆಗೆ ಬಂದಿದ್ದಾನೆ. ಈ ವೇಳೆ ಗೌರಮ್ಮ ಜೊತೆ ಮತ್ತೆ ಜಗಳ ಆರಂಭವಾಗಿದ್ದು, ಮಾತಿನ ಚಕಮಕಿ ತಾರಕಕ್ಕೇರಿದೆ. ಕೋಪೋದ್ರಿಕ್ತನಾದ ನಾಗರಾಜ್, ಗೌರಮ್ಮನ ಕತ್ತು ಕುಯ್ತು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮೈಕೋ ಲೇಔಟ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ತಲೆಮರೆಸಿಕೊಂಡಿರುವ ಆರೋಪಿ ನಾಗರಾಜ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಿಳೇಕಹಳ್ಳಿ ಬಳಿಯ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ನವವಿವಾಹಿತೆ ಸಾವು
ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, 24 ವರ್ಷದ ನವವಿವಾಹಿತೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇದನ್ನು ಆತ್ಮ*ಹತ್ಯೆ ಎಂದು ಬಿಂಬಿಸಲು ಪತಿ ಮತ್ತು ಕುಟುಂಬಸ್ಥರು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಸದ್ಯ ಯಲಹಂಕ ನ್ಯೂ ಟೌನ್ ಪೊಲೀಸರು ಮೃತಳ ಪತಿ ಪವನ್ ಕಲ್ಯಾಣ್ ಎಂಬಾತನನ್ನು ಬಂಧಿಸಿದ್ದಾರೆ.