ತುಮಕೂರು: ತಿಪಟೂರು ತಾಲೂಕಿನ ಮಾದಿಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಇಂದು (ಭಾನುವಾರ) (KSRTC Bus Accident) ಬೆಳಗ್ಗೆ ನಡೆದಿದೆ. ತಿಪಟೂರು ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದ ನಿವಾಸಿಗಳಾದ ಸಂಜು (23) ಹಾಗೂ ಹರ್ಷ (23) ಮೃತ ದುರ್ದೈವಿಗಳು. ಮೃತ ಹರ್ಷ ಅವರು ಎಂಬಿಎ ಪದವಿ ಪೂರ್ಣಗೊಳಿಸಿದ್ದು, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಇಬ್ಬರೂ ಯುವಕರು ಸಂಬಂಧಿಕರ ಮದುವೆ ಕಾರ್ಯಕ್ರಮವನ್ನು ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ವಾಪಸಾಗುತ್ತಿದ್ದರು. ತಿಪಟೂರು–ಅರಸೀಕೆರೆ ರಸ್ತೆಯ ಮಾದಿಹಳ್ಳಿ ಬಳಿಯ ಬಾಲಾಜಿ ಕಲ್ಯಾಣ ಮಂಟಪದ ಮುಂಭಾಗದಲ್ಲಿ ಬೈಕ್ ಯೂ-ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ, ಅರಸೀಕೆರೆ ಕಡೆಯಿಂದ ತಿಪಟೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ (KSRTC) ಬಸ್ ವೇಗವಾಗಿ ಬಂದು ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಇಬ್ಬರೂ ಯುವಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿತ್ತು. ನಗರದ ಎನ್.ಆರ್. ಮೊಹಲ್ಲಾ ನಿವಾಸಿಗಳಾದ ವೆಂಕಟೇಶ್ ಹಾಗೂ ಜ್ಯೋತಿ ದಂಪತಿಯ ಪುತ್ರಿ ವೈಷ್ಣವಿ (17) ಮೃತಪಟ್ಟ ವಿದ್ಯಾರ್ಥಿನಿ. ಮೈಸೂರು ಅರಮನೆ ಸನಿಹದ ಚಾಮರಾಜ ವೃತ್ತದ ಬಳಿ ಈ ದುರಂತ ನಡೆದಿದೆ.
ವೈಷ್ಣವಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ಹಿಂತಿರುಗಲು ತಂದೆ ವೆಂಕಟೇಶ್ ಅವರ ಜೊತೆಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಮೈಸೂರು ಅರಮನೆ ಮುಂಭಾಗದ ಚಾಮರಾಜ ವೃತ್ತದ ಬಳಿ ಬಂದ ಬಸ್ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ನಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ ವೈಷ್ಣವಿ ತೀವ್ರ ಗಾಯಗೊಂಡು ಕೊನೆಯುಸಿರೆಳೆದಿದ್ದಾಳೆ.