ಮುಸ್ಲಿಂ ವ್ಯಕ್ತಿಯಿಂದ ಅಪ್ರಾಪ್ತ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ಕೇಸ್; ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ
ಮಹಾರಾಷ್ಟ್ರದ ಅಮರಾವತಿಯಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350 ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದ ವ್ಯಕ್ತಿಯನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಇದೀಗ ಮತ್ತೊಂದು ಬೆಳವಣಿಗೆಯಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಸಂಗ್ರಹ ಚಿತ್ರ -
ಮುಂಬೈ: ಮಹಾರಾಷ್ಟ್ರದ (Maharashtra) ಅಮರಾವತಿಯಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (Physical Assault) ಎಸಗಿ 350 ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದ ವ್ಯಕ್ತಿಯನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಇದೀಗ ಮತ್ತೊಂದು ಬೆಳವಣಿಗೆಯಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅಪ್ರಾಪ್ತ ವಯಸ್ಕ ಬಾಲಕಿ ತನ್ನ ಜೀವನವನ್ನು ಕೊನೆಗೊಳಿಸುವ ಉದ್ದೇಶದಿಂದ ವಝರ್ ಅಣೆಕಟ್ಟಿನ ಬಳಿ ತೆರಳಿದ್ದಳು ಎಂದು ತಿಳಿದು ಬಂದಿದೆ. ವಿಷಯ ತಿಳಿದ ಪೊಲೀಸರು ತಕ್ಷಣವೇ ಆಕೆಯನ್ನು ರಕ್ಷಿಸಿದ್ದಾರೆ.
ಅಮರಾವತಿ ಜಿಲ್ಲೆಯ ಪರತ್ವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಸುಮಾರು 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಹುಡುಗಿಯರನ್ನು ಪ್ರೀತಿಸುವ ನಾಟಕವಾಡಿ ಅವರ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ಅವರನ್ನು ವೇಶ್ಯಾವಾಟಿಕೆಗೆ ದೂಡಿದ್ದ ಆರೋಪದ ಮೇರೆಗೆ ಅಯಾಜ್ ಮತ್ತು ಇತರ ಎಂಟು ಜನರನ್ನು ಬಂಧಿಸಲಾಗಿದೆ.
ಲೈಂಗಿಕ ದೌರ್ಜನ್ಯಕ್ಕೊಳಗಾದ ಎಂಟು ಮಹಿಳೆಯರು ಆಯಾಜ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣವು ರಾಜಕೀಯ ಗಮನ ಸೆಳೆದಿದ್ದು, ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರು ಪರತ್ವಾಡಕ್ಕೆ ಭೇಟಿ ನೀಡಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥ ಶುಭಂ ಕುಮಾರ್ ಅವರಿಂದ ಪ್ರಕರಣದ ಬಗ್ಗೆ ವಿವರವಾದ ಮಾಹಿತಿಯನ್ನು ಕೋರಿದ್ದಾರೆ.
ಅಪ್ರಾಪ್ತ ಬಾಲಕನ ಅಪಹರಣ, ಲೈಂಗಿಕ ದೌರ್ಜನ್ಯ ನೀಡಿ ಹಣ ಸುಲಿಗೆ ಮಾಡಲು ಯತ್ನಿಸಿದ ಮಹಿಳೆಯ ಬಂಧನ
ಶನಿವಾರ ಪೊಲೀಸರು ನಾಗ್ಪುರದ 15 ವರ್ಷದ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು , ಮತ್ತೊಬ್ಬ ಹದಿಹರೆಯದ ಸಂತ್ರಸ್ತೆಯ ತಾಯಿಯಿಂದ ದೂರು ದಾಖಲಿಸಿಕೊಂಡಿದ್ದಾರೆ. 16 ವರ್ಷದ ಸಂತ್ರಸ್ತೆಯ ತಾಯಿ, ಪ್ರಮುಖ ಆರೋಪಿ ಅಯಾಜ್‌ನ ಸ್ನೇಹಿತ ಉಜೈರ್ ಖಾನ್ ವಿರುದ್ಧ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿದ್ದಾರೆ. ಪೊಲೀಸರು ಉಜೈರ್ ಖಾನ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಹೊಸ ಪ್ರಕರಣ ದಾಖಲಿಸಿದ್ದಾರೆ. ಈಗಾಗಲೇ ಆರೋಪಿಗಳ ಬಂಧನವಾಗಿದ್ದು, ಏಳು ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್, ಹಾರ್ಡ್ ಡಿಸ್ಕ್ ಮತ್ತು ಟ್ಯಾಬ್ಲೆಟ್ ಸೇರಿದಂತೆ ಹಲವು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಕಂದಾಯ ಸಚಿವ ಚಂದ್ರಶೇಖರ್ ಬವಾಂಕುಲೆ ಶನಿವಾರ ತಿಳಿಸಿದ್ದಾರೆ.