ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್; ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಇದೀಗ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ. 2024ರ ಏಪ್ರಿಲ್ 20ರಂದು ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳ ಕುರಿತು ನ್ಯಾಯಾಲಯ ಪ್ರಶ್ನಿಸಿದಾಗ ಶಾರೀಕ್ ತಾನು ನಿರಪರಾಧಿ ಎಂದು ಹೇಳಿದ್ದ.
ಸಂಗ್ರಹ ಚಿತ್ರ -
ಬೆಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ (Mangalore cooker bomb blast case) ಮಹತ್ವದ ಬೆಳವಣಿಗೆ ನಡೆದಿದೆ. ಇದೀಗ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ. 2022ರ ನವೆಂಬರ್ 19ರಂದು ಶಾರೀಕ್ ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ. ಟೈಮರ್ ದೋಷದಿಂದ ಸಂಭವಿಸಿದ್ದ ಸ್ಫೋಟದಲ್ಲಿ ಆಟೋ ಚಾಲಕನೂ ಗಂಭೀರವಾಗಿ ಗಾಯಗೊಂಡಿದ್ದ. ಬಳಿಕ ಎನ್‌ಐಎ ಅಧಿಕಾರಿಗಳು ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದರು.
2024ರ ಏಪ್ರಿಲ್ 20ರಂದು ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳ ಕುರಿತು ನ್ಯಾಯಾಲಯ ಪ್ರಶ್ನಿಸಿದಾಗ ಶಾರೀಕ್ ತಾನು ನಿರಪರಾಧಿ ಎಂದು ಹೇಳಿದ್ದ. ಆದರೆ 2025ರ ಡಿಸೆಂಬರ್‌ನಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 229 ಅಡಿಯಲ್ಲಿ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿ ತನ್ನ ನಿಲುವು ಬದಲಿಸಿದ್ದ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಕಳೆದ ಮಾರ್ಚ್ 26ರಂದು ನ್ಯಾಯಾಲಯ ಈ ಅರ್ಜಿಯನ್ನು ಅಂಗೀಕರಿಸಿದೆ.
ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಶಾರೀಕ್, ಐಸಿಎಸ್ ಹಾಗೂ ಸಿಮಿ ಉಗ್ರ ಸಂಘಟನೆಗಳಿಂದ ಪ್ರೇರಿತನಾಗಿದ್ದ. ಶಿವಮೊಗ್ಗ ಐಸಿಸ್ ಮಾಡ್ಯುಲ್ ಸದಸ್ಯನಾಗಿದ್ದ. ಈತ 2020ರಲ್ಲಿ ಮಂಗಳೂರಿನ ಗೋಡೆ ಬರಹ ಹಾಗೂ ಶಿವಮೊಗ್ಗ ತುಂಗಾ ನದಿ ತೀರದಲ್ಲಿ ನಡೆಸಿದ್ದ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣಗಳ ಆರೋಪಿಯಾಗಿದ್ದಾನೆ. ಸದ್ಯ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಮಾತ್ರ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ.
Pahalgam Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಯಾರೆಂದು ಬಹಿರಂಗಪಡಿಸಿದ ಎನ್‌ಐಎ!
ಈ ಪ್ರಕರಣದಲ್ಲಿ ಕುಕ್ಕರ್ನಲ್ಲಿ ಇಎಲ್ಡಿ ಇಟ್ಟು ಟೈಮರ್ ಫಿಕ್ಸ್ ಮಾಡಲಾಗಿತ್ತು. 90 ನಿಮಿಷಗಳ ಫಿಕ್ಸ್ ಮಾಡುವ ಬದಲು 9 ನಿಮಿಷಕ್ಕೆ ತಪ್ಪಾಗಿ ನಿಗದಿಪಡಿಸಿದ್ದರಿಂದ ಆಟೋದಲ್ಲಿ ತೆರಳುವಾಗ ಮಾರ್ಗ ಮಧ್ಯೆ ಸ್ಫೋಟಗೊಂಡಿತ್ತು. ಪ್ರಕರಣದ ಎರಡನೇ ಆರೋಪಿ ಸೈಯದ್ ಯಾಸೀನ್ ಬಾಂಬ್ ತಯಾರಿಕೆಗೆ ಅಗತ್ಯವಾದ ಉಪಕರಣಗಳನ್ನ ಪೂರೈಸಿದ ಆರೋಪದಡಿ ಬಂಧಿಸಲಾಗಿತ್ತು.