ವಿದ್ಯಾರ್ಥಿನಿಗೆ ನಮಾಜ್ ಮಾಡಲು ಒತ್ತಾಯ; ಹಿಂದೂ ಸಂಘಟನೆಗಳಿಂದ ಪ್ರತಿಭಟನೆ, ಪೊಲೀಸರಿಂದ ತನಿಖೆ
Student forced to offer namaz: ಮಹಾರಾಷ್ಟ್ರದ ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ವೊಂದರಲ್ಲಿ ಶಂಕಿತ ರ‍್ಯಾಗಿಂಗ್‌ಗೆ ಸಂಬಂಧಿಸಿದ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಅಪರಿಚಿತ ವಿದ್ಯಾರ್ಥಿನಿಯೊಬ್ಬಳು ಸಹಪಾಠಿಯನ್ನು ನಮಾಜ್ ಮಾಡಲು ಒತ್ತಾಯಿಸಿದ್ದಾಳೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಪ್ರಕರಣವು ಉದ್ವಿಗ್ನತೆಗೆ ಕಾರಣವಾಗಿದೆ.
ಸಾಂದರ್ಭಿಕ ಚಿತ್ರ -
ಪುಣೆ: ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಶಂಕಿತ ರ‍್ಯಾಗಿಂಗ್ (Ragging) ಪ್ರಕರಣದಲ್ಲಿ, ಅಪರಿಚಿತ ವಿದ್ಯಾರ್ಥಿನಿಯೊಬ್ಬಳು ಸಹಪಾಠಿಯನ್ನು ನಮಾಜ್ (namaz) ಮಾಡಲು ಒತ್ತಾಯಿಸಿದ್ದಾಳೆ ಎಂದು ಆರೋಪ ಕೇಳಿಬಂದಿದೆ. ಮಹಾರಾಷ್ಟ್ರದ (Maharashtra) ಪಾಲ್ಘರ್ ಜಿಲ್ಲೆಯ ವಾಡಾ ತಾಲೂಕಿನಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಸಂಸ್ಥೆಯ ಆಡಳಿತ ಮಂಡಳಿಯು ಹಾಸ್ಟೆಲ್ ವಾರ್ಡನ್ ಮತ್ತು ಶಿಕ್ಷಕರನ್ನು ಅಮಾನತುಗೊಳಿಸಿದೆ.
ಈ ಘಟನೆ ಭಾನುವಾರ ರಾತ್ರಿ ಪೋಶೇರಿಯ ಕಾಲೇಜಿನಲ್ಲಿ ನಡೆದಿದ್ದು, ಉದ್ವಿಗ್ನತೆಗೆ ಕಾರಣವಾಯಿತು. ವಿಚಾರ ತಿಳಿದು ಬಲಪಂಥೀಯ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸಿದರು. ನಂತರ ಅಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಸಂಬಂಧ ಸೋಮವಾರ ರಾತ್ರಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ ಈ ಘಟನೆಗೆ ರ‍್ಯಾಗಿಂಗ್ ನಡೆದಿರುವ ಸಾಧ್ಯತೆಯ ಬಗ್ಗೆ ಸೂಚಿಸುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಸಿಕ್‌ನ ಪ್ರಥಮ ವರ್ಷದ ಭೌತಚಿಕಿತ್ಸೆಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಹಾಸ್ಟೆಲ್‌ನ ಐದನೇ ಮಹಡಿಯಲ್ಲಿ ಮುಖ ಮುಚ್ಚಿಕೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನನ್ನು ತಡೆದಳು. ನಿರಾಕರಿಸಿದರೂ ಇಸ್ಲಾಮಿಕ್ ಪ್ರಾರ್ಥನೆ ಮಾಡುವಂತೆ ಒತ್ತಡ ಹೇರಿದಳು. ಇದರಿಂದಾಗಿ ಭಯದ ವಾತಾವರಣ ಸೃಷ್ಟಿಯಾಯಿತು ಎಂದು ಹೇಳಿದ್ದಾಳೆ.
ಮರುದಿನ ಬೆಳಗ್ಗೆ ಸಂತ್ರಸ್ತೆ ತನ್ನ ಕುಟುಂಬಕ್ಕೆ ಮಾಹಿತಿ ನೀಡಿದ್ದಾಳೆ. ಕಾಲೇಜು ಆಡಳಿತ ಮಂಡಳಿಯಿಂದ ಯಾವುದೇ ಪ್ರತಿಕ್ರಿಯೆ ಬರದ ಕಾರಣ ಅವರು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಅವರನ್ನು ಸಂಪರ್ಕಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾಲ್ಘರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಯತೀಶ್ ದೇಶಮುಖ್ ಅವರು ಪರಿಸ್ಥಿತಿಯನ್ನು ಪರಿಶೀಲಿಸಲು ಕ್ಯಾಂಪಸ್‌ಗೆ ಭೇಟಿ ನೀಡಿದರು.
ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಮಹಾರಾಷ್ಟ್ರ ರ್ಯಾಗಿಂಗ್ ನಿಷೇಧ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ನಾವು ಪ್ರಕರಣ ದಾಖಲಿಸಿದ್ದೇವೆ. ಆರೋಪಿಯನ್ನು ಗುರುತಿಸಲು ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಇತರ ವಿದ್ಯಾರ್ಥಿಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ ಎಂದು ಎಸ್‌ಪಿ ದೇಶಮುಖ್ ಹೇಳಿದರು. ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಆಕ್ರೋಶಕ್ಕೆ ಪ್ರತಿಕ್ರಿಯೆಯಾಗಿ, ಕಾಲೇಜು ಆಡಳಿತವು ಹಾಸ್ಟೆಲ್ ವಾರ್ಡನ್ ಮತ್ತು ಶಿಕ್ಷಕರನ್ನು ಅಮಾನತುಗೊಳಿಸಿದೆ. ಕಾಲೇಜಿನ ಕಾರ್ಯವೈಖರಿಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೋರಿ ವಿಎಚ್‌ಪಿ ಕಾರ್ಯಕರ್ತರು ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ್ದು, ಈ ಹಿಂದೆಯೂ ಇದೇ ರೀತಿಯ ಘಟನೆಗಳು ನಡೆದಿವೆ ಎಂದು ಆರೋಪಿಸಿದ್ದಾರೆ.
ಕಾಲೇಜು ಆಡಳಿತ ಮಂಡಳಿಯ ಪ್ರತಿನಿಧಿಯೊಬ್ಬರು ಪೊಲೀಸರೊಂದಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಆದರೆ ಹಿಂದೆ ಯಾವತ್ತೂ ಇಂತಹ ಘಟನೆ ನಡೆದಿಲ್ಲ ಎಂದು ಅವರು ಹೇಳಿದರು. ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಪ್ರದೇಶದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.