ಜಿಲ್ಲಾಧಿಕಾರಿಗೆ ಅಶ್ಲೀಲ ಸಂದೇಶ, ಮನೆಗೆ ನುಗ್ಗಿ ಅನುಚಿತ ವರ್ತನೆ; ಟಿವಿಕೆ ಶಾಸಕನ ಬಂಧನ
TVK MLA C Arul Vignesh: ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲಾಧಿಕಾರಿ ಜೆ. ಇ. ಪದ್ಮಜಾ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ತಮಿಳಗ ವೆಟ್ರಿ ಕಳಗಂ ಪಕ್ಷದ ಶಾಸಕ ಸಿ. ಅರುಳ್ ವಿಘ್ನೇಶ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಜೆ.ಇ. ಪದ್ಮಜಾ ಅವರು ನವೆಂಬರ್ 23, 2026 ರಂದು ಶಾಸಕರ ವಿರುದ್ಧ ಔಪಚಾರಿಕ ದೂರು ದಾಖಲಿಸಿದ್ದರು. ಇಂದು ಅವರ ಬಂಧನವಾಗಿದೆ.
ಸಂಗ್ರಹ ಚಿತ್ರ -
ಚೆನ್ನೈ: ತಮಿಳುನಾಡಿನ (Tamil Nadu) ಕಲ್ಲಾಕುರಿಚಿ ಜಿಲ್ಲಾಧಿಕಾರಿ ಜೆ. ಇ. ಪದ್ಮಜಾ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಶಾಸಕ ಸಿ. ಅರುಳ್ ವಿಘ್ನೇಶ್ (C Arul Vignesh) ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಜೆ.ಇ. ಪದ್ಮಜಾ ಅವರು ನವೆಂಬರ್ 23, 2026 ರಂದು ಶಾಸಕರ ವಿರುದ್ಧ ಔಪಚಾರಿಕ ದೂರು ದಾಖಲಿಸಿದ್ದರು. ದೂರು ದಾಖಲಾದ ನಾಲ್ಕು ದಿನಗಳ ನಂತರ ಇಂದು ಕಲ್ಲಕುರಿಚಿಯ ನಿವಾಸದಿಂದ 36 ವರ್ಷದ ಅರುಳ್ ವಿಘ್ನೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಶಾಸಕರು ತಮಗೆ ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಉಡುಗೆ ಮತ್ತು ರೂಪದ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದಾರೆ ಹಾಗೂ ರಾತ್ರಿ ವೇಳೆ ತಮ್ಮ ಅಧಿಕೃತ ನಿವಾಸಕ್ಕೆ ಬಂದು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಜಿಲ್ಲಾಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ. ಕಲ್ಲಕುರಿಚಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಿರುಕುಳ ತಡೆ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 75 (ಲೈಂಗಿಕ ಕಿರುಕುಳ), 78 (ಹಿಂಬಾಲಿಸುವುದು), 79 (ಮಹಿಳೆಯ ಗೌರವಕ್ಕೆ ಧಕ್ಕೆ) ಮತ್ತು 132 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ) ಸೇರಿದಂತೆ ಐದು ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಷಯ ಬೆಳಕಿಗೆ ಬರುತ್ತಿದ್ದಂತೆ ರಾಷ್ಟ್ರೀಯ ಮಹಿಳಾ ಆಯೋಗ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡು, ತಕ್ಷಣದ ಕ್ರಮಕ್ಕೆ ಆಗ್ರಹಿಸಿ ವರದಿ ಕೇಳಿದೆ. ಮದ್ರಾಸ್ ಹೈಕೋರ್ಟ್ ಸಹ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಹಿರಿಯ ಪೊಲೀಸ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ಬಂಧನಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಶಾಸಕ ಅರುಳ್ ವಿಘ್ನೇಶ್, ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. "ಇದು ನನ್ನ ಹಾಗೂ ಮುಖ್ಯಮಂತ್ರಿ ವಿಜಯ್ ನೇತೃತ್ವದ ನಮ್ಮ ಸರ್ಕಾರದ ವರ್ಚಸ್ಸಿಗೆ ಮಸಿ ಬಳಿಯಲು ವಿರೋಧ ಪಕ್ಷಗಳು ಹೆಣೆದಿರುವ ರಾಜಕೀಯ ಪಿತೂರಿ. ನಾನು ಯಾವುದೇ ತಪ್ಪು ಮಾಡಿಲ್ಲ, ತನಿಖೆಯಿಂದ ಸತ್ಯ ಹೊರಬರಲಿದೆ" ಎಂದು ಹೇಳಿದ್ದಾರೆ.