Friday, 13th December 2024

ಜಿಲ್ಲೆಯಲ್ಲಿ 271 ಡೆಂಘೀ ಪ್ರಕರಣ ನಿರ್ಮೂಲನೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ಡಿಸಿ ರವೀಂದ್ರ ಸೂಚನೆ

chickballapur

ಚಿಕ್ಕಬಳ್ಳಾಪುರ : ಜನವರಿಯಿಂದ ಈವರೆಗೆ ಜಿಲ್ಲೆಯಲ್ಲಿ ೨೭೧ ಡೆಂಘೀ ಪ್ರಕರಣಗಳು ದಾಖಲಾಗಿವೆ. ಜುಲೈ ಮಾಹೆಯಲ್ಲಿ ೧೨೦ ಡೆಂಘೀ ಪ್ರಕರಣಗಳು ದಾಖಲಾಗಿದ್ದವು. ಆಗಸ್ಟ್ ಮಾಹೆಯಲ್ಲಿ ೫೭ ಪ್ರಕರಣಗಳು ದಾಖಲಾಗಿವೆ. ಶೇ. ೫೦ ರಷ್ಟು ಪ್ರಮಾಣದಲ್ಲಿ ಪ್ರಕರಣಗಳು ಇಳಿಕೆಯಾಗಿದ್ದರೂ ಕೂಡ ಗ್ರಾಮಾಂತರ ಪ್ರದೇಶಗಳಲ್ಲಿಯೇ ಶೇ. ೭೯ ರಷ್ಟು ಪ್ರಕರಣಗಳು ವರದಿಯಾಗುತ್ತಿವೆ. ಪ್ರಕರಣಗಳು ಇಳಿಕೆಯಾಗುತ್ತಿವೆ ಎಂದು ನಿರ್ಲಕ್ಷ್ಯ ದೋರಣೆ ತೋರಬೇಡಿ. ಎಂದಿನಂತೆ ಡೆಂಘೀ ನಿಯಂತ್ರಣಕ್ಕೆ ಕೈಗೊಳ್ಳುತ್ತಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಮುಂದುವರೆಸಲು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಗ್ರಾಮ ಮತ್ತು ವಾರ್ಡ್ ಮಟ್ಟದಲ್ಲಿ ಕುಡಿಯುವ ನೀರಿನ ಪೂರೈಕೆಗೆ ಎಂದಿನಂತೆ ಕ್ರಮವಹಿಸಬೇಕು. ಜೂನ್-೨೦೨೪ರ ಮಾಹೆಯವರೆಗೆ ಖಾಸಗಿ ಕೊಳವೆಬಾವಿಗಳಿಂದ ನೀರು ಖರೀದಿಸಿರುವುದನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅನುದಾನದಿಂದ ಪಾವತಿಸುವುದು. ಜುಲೈ ಮಾಹೆಯ ನಂತರ ಬಿಲ್ಲುಗಳನ್ನು ಸ್ಥಳೀಯಾಡಳಿದಿಂದ ಸೃಜನೆಯಾಗುವ ಅನುದಾನದಿಂದ ಪಾವತಿಸಲು ಕ್ರಮವಹಿಸಬೇಕು. ಒಟ್ಟಾರೆ ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಕ್ರಮ ವಹಿಸಲು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ

೨೦೨೪-೨೫ನೇ ಸಾಲಿನ ಆಯಾವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಸರ್ಕಾರ ಘೋಷಿಸಲಾಗಿರುತ್ತದೆ. ಈ ವ್ಯವಸ್ಥೆಯನ್ನು ೨೦೧೧ರಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ, ಮಾರ್ಚ್ ೨೦೨೪ರಲ್ಲಿ ತುಮಕೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿ ನೋಂದಣಿ ಕಾಯ್ದೆ-೧೯೦೮ರ ಕಲಂ (೫) ಹಾಗೂ ಕಲಂ (೬) ರಡಿಯಲ್ಲಿ ಅನುಷ್ಟಾನಗೊಳಿಸಲಾಗಿದೆ. ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಕಾರಣದಿಂದ ಎನಿವೇರ್ ನೋಂದಣಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಉಪನೋಂದಣಿ ಕಚೇರಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದರು.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿರುತ್ತದೆ. ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ. ಆದ್ದರಿಂದ ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತಲ್ಲೂ ಮಳೆಯ ಪ್ರಮಾಣ ಉತ್ತಮವಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ರಾಗಿ, ಮುಸುಕಿನ ಜೋಳ, ತೊಗರಿ, ನೆಲಕಡಲೆ ಇನ್ನಿತರ ಬೆಳೆಗಳ ಬಿತ್ತನೆಯು  ಶೇ ೮೫ ರಷ್ಟು ಆಗಿದೆ. ಮುಂದಿನ ದಿನಗಳಲ್ಲಿ ಶೇ ೧೦೦ ರಷ್ಟು ಬಿತ್ತನೆ ಕಾರ್ಯವಾಗಲು ರೈತರಿಗೆ ಅಧಿಕಾರಿಗಳು ನೆರವಾಗಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.