Thursday, 3rd October 2024

ಕಲುಷಿತ ನೀರು ಸೇವಿಸಿ 50 ಜನರು ಅಸ್ವಸ್ಥ

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 50 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ.

ದೀಪಾವಳಿ ಹಬ್ಬದ ಸಂಭ್ರಮದಲ್ಲಿರಬೇಕಾದ ಗ್ರಾಮದಲ್ಲಿ ಅನಾರೋಗ್ಯದಿಂದ ಜನರು ಬಳಲುತ್ತಿದ್ದಾರೆ.

ನಲ್ಲಿಗಳಿಗೆ ನೀರು ಪೂರೈಸುವ ಪೈಪ್‌ಲೈನ್ ಒಡೆದು ಚರಂಡಿ ನೀರು ಕುಡಿಯುವ ನೀರಿಗೆ ಸೇರ್ಪಡೆಯಾಗುತ್ತಿದ್ದು, ಇದನ್ನು ಸೇವಿಸಿದ ಜನರ ಆರೋಗ್ಯದಲ್ಲಿ ಏರುಪೇರಾಗಿದೆ. 3 ದಿನಗಳ ಅಂತರದಲ್ಲಿ ಸುಮಾರು 50ಕ್ಕೂ ಹೆಚ್ಚು ಜನರ ಅಸ್ವಸ್ಥ ಗೊಂಡಿದ್ದಾರೆ. ಅಸ್ವಸ್ಥಗೊಂಡಿರುವ ಗ್ರಾಮಸ್ಥರನ್ನು ರಾಮದುರ್ಗದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ, ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿರು ವವವರ ಯೋಗ ಕ್ಷೇಮ ವಿಚಾರಿಸಿದ ಶಾಸಕರು ರೋಗಿಗಳಿಗೆ ಸೂಕ್ತ ಚಿಕಿತ್ಸಾ ವ್ಯವಸ್ಥೆ ಮಾಡುವಂತೆ ರಾಮದುರ್ಗದ ಸರ್ಕಾರಿ ಆಸ್ಪತ್ರೆಯ ಆರೋಗ್ಯಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ.

ಘಟನೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಅಸ್ವಸ್ಥರ ಕುಟುಂಬಸ್ಥರು ಗ್ರಾಮ ಪಂಚಾಯತಿ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾ ವ್ಯಾಪ್ತಿಯ ವಿವಿಧ ತಾಲ್ಲೂಕುಗಳಿಗೆ ಜಲಜೀವನ ಮಿಷನ್ ಅಡಿ ಕುಡಿಯುವ ನೀರಿನ ಒದಗಿಸುವ ಯೋಜನೆಗಾಗಿ ಒಟ್ಟು 960 ಕೋಟಿ ರೂಪಾಯಿ ಗಳನ್ನು ಮಂಜೂರು ಮಾಡಿದ್ದರು.