ತುಮಕೂರು: ರಾಜ್ಯದಲ್ಲಿ ವಸತಿ ಇಲಾಖೆಯನ್ನು ಮತ್ತಷ್ಟು ಸದೃಢಗೊಳಿಸಿ ಅರ್ಹರಿಗೆ ಸೂರು ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುವು ದಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸೂರು ಇಲ್ಲದ ಬಡವರನ್ನು ಗುರುತಿಸಿ ಅವರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ 5 ಗ್ಯಾರಂಟಿಗಳನ್ನು ನೀಡಿ ದ್ದು, ಅವುಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ನುಡಿದಂತೆ ನಾವು ನಡೆದಿದ್ದೇವೆ ಎಂದು ಹೇಳಿದರು.
ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಲವರನ್ನು ಮಾತ್ರ ಊಟಕ್ಕೆ ಕರೆದಿದ್ದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ಊಟಕ್ಕೆ ಕರೆಯುವುದು ತಪ್ಪಾ, ಪರಮೇಶ್ವರ್ ಅವರು ನನ್ನನ್ನು ಸಹ ಊಟಕ್ಕೆ ಕರೆದಿದ್ದರು. ಅಂದು ನಾನು ಹೋಗಲು ಸಾಧ್ಯವಾಗಲಿಲ್ಲ. ಇದರಲ್ಲಿ ವಿಶೇಷತೆ ಏನೂ ಇಲ್ಲ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವೂ ಇಲ್ಲ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹಮದ್, ಇಲಾಹಿ, ಪಾಲಿಕೆ ಸದಸ್ಯರಾದ ನಯಾಜ್, ಫಯಾಜ್, ಗಯಾಜ್ ಪಾಷ, ಫಯಾಜ್ ಮತ್ತಿತರರು ಉಪಸ್ಥಿತರಿದ್ದರು.