ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದೆ.
ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿಯ ಮನೆ ಸೇರಿ ವಿವಿಧ ಕಡೆ ಪರಿಶೀಲನೆ ನಡೆಸ ಲಾಗುತ್ತಿದೆ. ಮಂಗಳವಾರ ಬೆಳಗ್ಗೆ ಕರ್ನಾಟಕದ ಭ್ರಷ್ಟಾಚಾರ ನಿಗ್ರಹದಳದ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನ್ಯಾಷನಲ್ ಟ್ರಾವೆಲ್ಸ್ ಮಾಲೀಕರು ಆಗಿರುವ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ದಾಳಿ ಮಾಡ ಲಾಗಿದೆ.
ಬೆಂಗಳೂರಿನ 5 ಪ್ರದೇಶಗಳಲ್ಲಿ 40ಕ್ಕೂ ಅಧಿಕ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿದೆ. ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಸಂಜೆಯ ತನಕ ಪರಿಶೀಲನೆ ಕಾರ್ಯ ನಡೆಯಲಿದೆ ಎಂದು ಅಂದಾಜಿಸಲಾಗಿದೆ.
2021ರ ಆಗಸ್ಟ್ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ದಾಳಿ ಮಾಡಿದ್ದರು.
ಎಸಿಬಿ ಅಧಿಕಾರಿಗಳು ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಮನೆ, ಸಿಲ್ವರ್ ಓಕ್ ಅಪಾರ್ಟ್ ಮೆಂಟ್, ಸದಾಶಿವನಗರದ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿಕೆ ಅಸೋಸಿಯೇಟ್ಸ್, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆಸಿ, ದಾಖಲೆ ಪರಿಶೀಲಿಸುತ್ತಿದ್ದಾರೆ.
ಜಮೀರ್ ಅಹ್ಮದ್ ಖಾನ್ ಐಷಾರಾಮಿ ಬಂಗಲೆ ನಿರ್ಮಾಣದ ವಿಚಾರಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ನಡೆದಿತ್ತು. ಬಳಿಕ ಅವರು ನೀಡಿದ ವರದಿ ಆಧರಿಸಿ ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲು ಮಾಡಿಕೊಂಡಿದ್ದರು.