ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದು, ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಪ್ರಯತ್ನದಲ್ಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆಬ್ರವರಿ 23 ರಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ರಾಜಧಾನಿ ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಎರಡು ಪ್ರಮುಖ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಬಳಿಕ ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚಿಸಲು ಪಕ್ಷದ ಮುಖಂಡರೊಂದಿಗೆ ಸಂಕ್ಷಿಪ್ತ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆ ಮತ್ತು ಪಕ್ಷದ ಮುಖಂಡರೊಂದಿಗಿನ ಸಭೆ ಬಳಿಕ ಗೃಹ ಸಚಿವ ಅಮಿತ್ ಬಳ್ಳಾರಿ ಜಿಲ್ಲೆಗೆ ತೆರಳಲಿದ್ದಾರೆ. ಬಳ್ಳಾರಿಯ ಸಂಡೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡ ಲಿದ್ದಾರೆ.
ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ , ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕ ಸಚಿವರು ಭಾಗವಹಿಸಲಿದ್ದು, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಕಳೆದ 12 ದಿನಗಳ ಅವಧಿಯಲ್ಲಿ ಎರಡನೇ ಬಾರಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ಫೆಬ್ರವರಿ 11 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ಅವರು ಅಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.