Friday, 22nd November 2024

ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ

ಬೆಂಗಳೂರು : ಇಂದಿನಿಂದ ರಾಜ್ಯದ 592 ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2023 ರ ಸಿಇಟಿ ( CET 2023) ಪರೀಕ್ಷೆ ನಡೆಸಲಿದ್ದು, ಈ ಬಾರಿ 2.61 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಕೆಇಎ ನಡೆಸುವ 2023 ರ ಸಿಇಟಿ ಮೇ. 20 ರಿಂದ 22 ರವರೆಗೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ 2.61 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 1.40 ಲಕ್ಷ ಬಾಲಕಿಯರು ಮತ್ತು 1.21 ಲಕ್ಷ ಬಾಲಕರು ಹಾಗೂ 8 ಮಂದಿ ತೃತೀಯ ಲಿಂಗಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ https:kea.kar.nic.in ವಿದ್ಯಾರ್ಥಿಗಳು ವೆಬ್ ಸೈಟ್ ನೋಡಬಹುದು.

ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿದ್ದು, ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗದಂತೆ ಅಥವಾ ಬೇರೆಯವನ್ನು ನಿಯೋಜಿಸದಂತೆ ಸೂಚನೆ ನೀಡಲಾಗಿದೆ.

ಇಂದು ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ, ಡಿಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಅಂದೇ ಸಿಇಟಿ ಪರೀಕ್ಷೆ ಕೂಡ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆಯಿದೆ.

ಈ ಹಿನ್ನೆಲೆ ಕೆಇಎ ( ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಬೆಂಗಳೂರು ನಗರ ಸಂಚಾರ ಪೊಲೀಸರ ಮೊರೆ ಹೋಗಿದ್ದು, ಇದಕ್ಕೆ ಏನಾದರೂ ಪರ್ಯಾಯ ವ್ಯವಸ್ಥೆಯನ್ನು ಮಾಡುವಂತೆ ಕೋರಿದೆ ಎನ್ನಲಾಗಿದೆ. ಯಾವ ಯಾವ ಸ್ಥಳಗಳಲ್ಲಿ ಟ್ರಾಫಿಕ್ ಸಮಸ್ಯೆ ಆಗುತ್ತೆ ಎಂಬುದನ್ನು ಮನಗಂಡು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದೆ.