Sunday, 15th December 2024

MLA Munirathna: ಮುನಿರತ್ನರನ್ನು ಪಕ್ಷದಿಂದ ಹೊರದಬ್ಬಿ, ದಲಿತರ ಕ್ಷಮೆ ಕೇಳಿ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಗುತ್ತಿಗೆದಾರರಿಗೆ ಜೀವ ಬೆದರಿಕೆ, ಜಾತಿನಿಂದನೆ ಮಾಡಿದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಿಎಂ ಸಿದ್ದರಾಮಯ್ಯ (MLA Munirathna) ಆಕ್ರೋಶ ಹೊರಹಾಕಿದ್ದಾರೆ. ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಬಿಜೆಪಿಯವರ “ಹಿಂದು ನಾವೆಲ್ಲ ಒಂದು” ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ. ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು ಹಿಂದುವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣರು. ಈ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಮುನಿರತ್ನ ಬಾಯಿಂದ ಉದುರಿದ ಅಣಿಮುತ್ತುಗಳು ಸಾಕ್ಷಿ ಎಂದು ಹೇಳಿದ್ದಾರೆ.

ವೈರಲ್‌ ಆಗಿರುವ ಆಡಿಯೊದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸೋ ಇಚ್ಛೆ ನಿಂದಿಸಿದ್ದಾರೆ, ಆತನಿಂದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ, ಕೊನೆಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇವೆಲ್ಲವೂ ಅತ್ಯಂತ ಗಂಭೀರ ಸ್ವರೂಪದ ಅಪರಾಧಗಳಾಗಿವೆ.

40% ಕಮಿಷನ್‌ ಸರ್ಕಾರ ತೊಲಗಿದರೂ ಅದರಿಂದ ಹುಟ್ಟಿರುವ ರಕ್ತಬೀಜಾಸುರರು ಉಳಿದಿದ್ದಾರೆ. ಈಗ ನಾವು ಕೈಗೆತ್ತಿಕೊಂಡಿರುವ ಸ್ವಚ್ಚತಾ ಅಭಿಯಾನದಲ್ಲಿ ಈ ಹೊಲಸನ್ನು ಎಲ್ಲಿ ಇಡಬೇಕು ಅಲ್ಲಿಗೆ ಖಂಡಿತಾ ತಲುಪಿಸುತ್ತೇವೆ. ಮಾಧ್ಯಮಗಳ ಮುಂದೆ ನಿಂತು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಉಪದೇಶ ಕೊಡುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್.ಅಶೋಕ ಅವರಿಗೆ ತಮ್ಮದೇ ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | D Kumaraswamy: ಬ್ರದರ್‌ಗಳ ಹಿನ್ನೆಲೆ ಜಗತ್ತಿಗೇ ಗೊತ್ತಿದೆ: ಡಿ.ಕೆ.ಸುರೇಶ್‌ಗೆ ತಿರುಗೇಟು ಕೊಟ್ಟ ಎಚ್.ಡಿ.ಕೆ

ಈಗ ಬಿಜೆಪಿ ನಾಯಕರಿಗೆ ಉಳಿದಿರುವುದು ಎರಡೇ ದಾರಿ. ಒಂದು ಮುನಿರತ್ನ ಅವರ ಹೇಳಿಕೆಗೆ ಬೆಂಬಲ ಕೊಟ್ಟು ತಾವು ದಲಿತ ವಿರೋಧಿಗಳು ಎಂದು ಒಪ್ಪಿಕೊಳ್ಳುವುದು, ಇಲ್ಲವೇ ನಾಡಿನ ದಲಿತ ಸಮುದಾಯದವರ ಬಳಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರದಬ್ಬುವುದು ಎಂದು ಕಿಡಿಕಾರಿದ್ದಾರೆ.

ಕೊಲೆ ಬೆದರಿಕೆ, ಜಾತಿ ನಿಂದನೆ; ಬಿಜೆಪಿ ಶಾಸಕ ಮುನಿರತ್ನ ವಶಕ್ಕೆ

ಬೆಂಗಳೂರು: ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರದ ನಂಗಲಿ ಬಳಿ ಶಾಸಕನನ್ನು ವಶಕ್ಕೆ ಪಡೆಯಲಾಗಿದೆ. ಮೊಬೈಲ್‌ ಲೊಕೇಶನ್‌ ಆಧರಿಸಿ ತೆರಳಿದ್ದ ಪೊಲೀಸರು, ಕೋಲಾರದಿಂದ ಆಂಧ್ರಕ್ಕೆ ತೆರಳುತ್ತಿದ್ದಾಗ ಶಾಸಕ ಮುನಿರತ್ನರನ್ನು (MLA Munirathna) ವಶಕ್ಕೆ ಪಡೆದಿದ್ದಾರೆ.

ಸದ್ಯ ಮುನಿರತ್ನರನ್ನು ಕೋಲಾರದಿಂದ ಬೆಂಗಳೂರಿಗೆ ಪೊಲೀಸರು ಕರೆತರುತ್ತಿದ್ದಾರೆ. ಪ್ರಕರಣ ದಾಖಲಾದ ಬಳಿಕ ಶಾಸಕ ತಲೆಮರೆಸಿಕೊಂಡಿದ್ದರು ಎಂದು ಹೇಳಲಾಗಿತ್ತು. ಆದರೆ, ತಾನು ಎಲ್ಲೂ ಹೋಗಿಲ್ಲ ಎಂದು ಮುನಿರತ್ನ ಹೇಳಿದ್ದರು. ಇದೀಗ ಆಂಧ್ರಕ್ಕೆ ತೆರಳುವಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಏನಿದು ಘಟನೆ?

ಗುತ್ತಿಗೆದಾರರಿಗೆ ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ (Munirathna) ವಿರುದ್ದ ಎರಡು ಎಫ್‌ಐಆರ್‌ ದಾಖಲಾಗಿತ್ತು. ಕಸ ನಿರ್ವಹಣೆ ಹಾಗೂ ವಿಲೇವಾರಿ ಸಂಬಂಧ ಲಂಚ ನೀಡುವಂತೆ ಶಾಸಕ ಮುನಿರತ್ನ ಒತ್ತಾಯಿಸಿದ್ದಾರೆ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಎಂಬವರು ದೂರು ನೀಡಿದ್ದರು.

ಇದನ್ನೂ ಓದಿ: Bangalore Hit and Run Case: ಭೀಕರ ಅಪಘಾತ; ಹಿಟ್‌ ಆ್ಯಂಡ್‌ ರನ್‌ಗೆ ಮೂವರು ವಿದ್ಯಾರ್ಥಿಗಳು ಬಲಿ

ಇನ್ನೊಂದು ಜಾತಿನಿಂದನೆ ಕಾಯಿದೆಯಡಿ ದೂರು ದಾಖಲಾಗಿತ್ತು. ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿದ್ದ ಚೆಲುವರಾಜು ಎಂಬುವವರು ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಂಡು ರಕ್ಷಣೆ ನೀಡಬೇಕೆಂದು ವೈಯಾಲಿಕಾವಲ್‌ ಪೊಲೀಸ್ ಠಾಣೆಗೆ ದೂರು ನೀಡಿದ್ದರು.