Friday, 13th December 2024

ಎಲ್ಲಾ ಸರ್ಕಾರಿ ಶಾಲೆಗಳಿಗೆ ಇಂದಿನಿಂದ ಉಚಿತ ನೀರು, ವಿದ್ಯುತ್ : ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಬುಧವಾರ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಸಿದ್ದ ರಾಮಯ್ಯ ಹೇಳಿದರು.

ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.

ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದರು.

ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು.