Friday, 22nd November 2024

ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಕೆ. ಎ. ದಯಾನಂದ್

ಬೆಂಗಳೂರು: ದೀಪಾವಳಿ ಹಬ್ಬ 2023ರ ಹಿನ್ನಲೆಯಲ್ಲಿ ಹಸಿರು ಪಟಾಕಿ ಮಾತ್ರ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಎ. ದಯಾನಂದ್ ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು ನಿಯಂತ್ರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು. “ದೀಪಾವಳಿ ಹಬ್ಬವನ್ನು ನವೆಂಬರ್ 11 ರಿಂದ 15ರವರೆಗೆ ಆಚರಿಸಲಾಗುತ್ತಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ಈ ಬಾರಿಯೂ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ ಹಾಗೂ ಬಳಸುವಂತಿಲ್ಲ” ಎಂದರು.

“ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿನ್ನೆಯಿದ್ದು ಕ್ಯೂಆರ್ ಕೋಡ್ ಇರುವ ಪಟಾಕಿಗಳನ್ನೇ ಉಪಯೋಗಿಸಬೇಕು” ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಹಬ್ಬದ ಸಂಧರ್ಭದಲ್ಲಿ ರಾತ್ರಿ 8 ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗಿದೆ. 100 ಡೆಸಿಬಲ್‌ಗಳಿಗಿಂತ ಹೆಚ್ಚು ಇದ್ದರೆ ಅವುಗಳು ಹಸಿರು ಪಟಾಕಿ ಎನಿಸಿಕೊಳ್ಳುವುದಿಲ್ಲ ಅದನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.