ಬೆಂಗಳೂರು: ದೊಡ್ಡ ಪ್ರಮಾಣದಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡಿದ ಸಂದರ್ಭ ಪ್ರತಿಯೊಬ್ಬರ ವರ್ಗಾವಣೆಗೂ ಪ್ರತ್ಯೇಕ ಕಾರಣ ನೀಡುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ತಮ್ಮನ್ನು ವರ್ಗಾವಣೆ ಮಾಡಿದ್ದ ಸರ್ಕಾರದ ಕ್ರಮ ಎತ್ತಿ ಹಿಡಿದಿದ್ದ ಕರ್ನಾಟಕ ಆಡಳಿತಾತ್ಮ ನ್ಯಾಯಾಧಿಕರಣ (ಕೆಎಟಿ) ಕ್ರಮ ಪ್ರಶ್ನಿಸಿ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾಗಿದ್ದ ಎಚ್.ಎಸ್.ವೀಣಾ ಮತ್ತಿತರರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ಪೀಠ ಈ ಆದೇಶ ನೀಡಿ ಅರ್ಜಿಗಳನ್ನು ವಜಾಗೊಳಿಸಿದೆ.
ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾಯಪೀಠ, ಸರ್ಕಾರದಲ್ಲಿ ವರ್ಗಾವಣೆ ಮಾಡಬಹುದಾದ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರ ತಾನು ಬಯಸಿದ ಹುದ್ದೆಯಲ್ಲಿ ದೀರ್ಘಕಾಲ ಉಳಿದುಕೊಳ್ಳುವ ಹಕ್ಕು ಹೊಂದಿರುವುದರಿಲ್ಲ ಎಂದು ತಿಳಿಸಿದೆ. ಜೊತೆಗೆ ಸರ್ಕಾರದ ನೌಕರರನ್ನು ನಿಗದಿತ ಅವಧಿಗಿಂತಲು ಹೆಚ್ಚು ಕಾಲ ಒಂದೇ ಸ್ಥಳದಲ್ಲಿ ಮುಂದುವರೆಸಲು ಅವಕಾಶ ನೀಡಿದಲ್ಲಿ ಅವರು ಸ್ಥಳೀಯವಾಗಿ ಸಂಬಂಧಗಳನ್ನು ಬೆಳೆಸಿಕೊಳ್ಳುವುದಕ್ಕೆ ಕಾರಣವಾಗಲಿದೆ. ಪಟ್ಟಭದ್ರ ಹಿತಾಸಕ್ತಿಯತ್ತ ಒತ್ತುನೀಡುವ ಸಾಧ್ಯತೆಯಿದೆಲಿದೆ ಎಂದು ಪೀಠ ತನ್ನ ಆದೇಶ ದಲ್ಲಿ ತಿಳಿಸಿದೆ.
ಕೆಎಟಿಯು ಎಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಿದ ಬಳಿಕವೇ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದ್ದು, ಆಡಳಿತಾತ್ಮ ಹಿತದೃಷ್ಠಿಯಿಂದ ವರ್ಗಾ ವಣೆ ಮಾಡಿದೆ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿದೆ. ಹೀಗಿರುವಾಗ ಕೆಎಟಿ ಆದೇಶದಲ್ಲಿ ಯಾವುದೇ ದೋಷ ಕಂಡು ಬರುತ್ತಿಲ್ಲ. ಹೀಗಾಗಿ, ಆ ಆದೇಶದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿ ಅರ್ಜಿಗಳನ್ನು ವಜಾಗೊಳಿಸಿದೆ.