ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿ. ಸಿ. ಗೌರಿ ಶಂಕರ್ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.
ಆದರೆ ಶಾಸಕರ ಪರ ವಕೀಲರ ಮನವಿ ಹಿನ್ನಲೆಯಲ್ಲಿ 30 ದಿನಗಳ ಕಾಲ ಆದೇಶಕ್ಕೆ ತಡೆ ನೀಡಿದೆ. ಕರ್ನಾಟಕದಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ.
ಗುರುವಾರ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಶಾಸಕ ಡಿ. ಸಿ. ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಬಿಜೆಪಿಯ ಬಿ. ಸುರೇಶ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ಸುಧೀರ್ಘ ವಿಚಾರಣೆ ನಡೆಸಿದ್ದ ಕೋರ್ಟ್ ಗುರುವಾರಕ್ಕೆ ತೀರ್ಪು ಕಾಯ್ದಿರಿಸಿತ್ತು.
ಶಾಸಕ ಡಿ. ಸಿ. ಗೌರಿ ಶಂಕರ್ ಪರ ವಕೀಲ ಹೇಮಂತ್ ರಾಜ್ ಈಗಾಗಲೇ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ. ಆದ್ದರಿಂದ ತೀರ್ಪಿಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಒಪ್ಪಿಗೆ ನೀಡಿದ ಕೋರ್ಟ್ 30 ದಿನಗಳ ಕಾಲ ಆದೇಶಕ್ಕೆ ತಡೆ ನೀಡಿದೆ. ಈ ಅವಧಿಯಲ್ಲಿ ಶಾಸಕರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಹೈಕೋರ್ಟ್ ತೀರ್ಪಿಗೆ ತಡೆ ಪಡೆಯಬಹುದು.
2018ರ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಡಿ. ಸಿ. ಗೌರಿ ಶಂಕರ್ ಕ್ಷೇತ್ರದ 32 ಸಾವಿರ ವಯಸ್ಕರು ಮತ್ತು 16 ಸಾವಿರ ಮಕ್ಕಳಿಗೆ ನಕಲಿ ವಿಮೆ ಬಾಂಡ್ ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.