Thursday, 12th December 2024

ವರ್ತೂರು ಸಂತೋಷ್​ಗೆ​ ಷರತ್ತುಬದ್ಧ ಜಾಮೀನು

ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪದ ಮೇಲೆ ಕನ್ನಡ ಬಿಗ್​ಬಾಸ್ ರಿಯಾಲಿಟಿ ಶೋ ಸ್ಫರ್ಧಿ ವರ್ತೂರ್ ಸಂತೋಷ್​ಗೆ ನ್ಯಾಯಾ ಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನಾಲ್ಕು ಸಾವಿರ ನಗದು ಭದ್ರತೆ ಹಾಗೂ ಒಬ್ಬರ ಶ್ಯೂರಿಟಿ ಒದಗಿಸುವಂತೆ ತಿಳಿಸಿ, ನಗರದ 2ನೇ ಎಸಿಜೆಎಂ ನ್ಯಾಯಾಲಯವು ಜಾಮೀನು ನೀಡಿತು.

ವರ್ತೂರು ಸಂತೋಷ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ್ದ ಎರಡನೇ ಎಸಿಜೆಎಂ ನ್ಯಾಯಾಲಯವು ಇಂದಿಗೆ ಆದೇಶ ಕಾಯ್ದಿರಿಸಿತ್ತು. ಸಂತೋಷ್ ಪರ ವಕೀಲ ನಟರಾಜ್ ಹಾಗೂ ಸರ್ಕಾರಿ ಅಭಿಯೋಜಕರು ನ್ಯಾಯಾಲಯದ ಮುಂದೆ ವಿಚಾರಣೆ ಮಂಡಿಸಿದ್ದರು. ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು‌ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ್ದರು.

ಹುಲಿ ಉಗುರು ಪೆಂಡೆಂಟ್ ಹೊಂದಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುವಾಗಲೇ ಸಂತೋಷ್​ನನ್ನು ಬಂಧಿಸಿದ್ದರು. ಈ ವೇಳೆ ಸಂತೋಷ್ ಧರಿಸಿದ್ದ ಹುಲಿ ಉಗುರು ವಶಕ್ಕೆ ಪಡೆದುಕೊಂಡಿದ್ದರು. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಂಧನ ಆಗುತ್ತಿದ್ದಂತೆ ಸಂತೋಷ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಆರೋಪಿ ಪರ ವಾದ ಮಂಡಿಸಿದ್ದ ವಕೀಲ ಕೆ.ಎನ್.ನಟರಾಜ್​ ಮಾತನಾಡಿ, ”ಕೃಷಿ ಕುಟುಂಬದ ಹಿನ್ನೆಲೆ ಹೊಂದಿರುವ ಸಂತೋಷ್‌ ವಿರುದ್ಧ ಯಾವುದೇ ಅಪರಾಧ ಪ್ರಕರಣಗಳಿಲ್ಲ. ಹುಲಿ‌ ಉಗುರಿನ‌ ಡಾಲರ್ ಧರಿಸಿರುವ ಆರೋಪದಡಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ನನ್ನ‌ ಕಕ್ಷಿದಾರರನ್ನು ವೀರಪ್ಪನ್ ರೀತಿಯಲ್ಲಿ ನಡೆಸಿಕೊಂಡಿದ್ದಾರೆ. ಹುಲಿ ಉಗುರು ಪೆಂಡೆಂಟ್ ಹೊಂದಿರುವ ನಟ, ನಿರ್ಮಾಪಕರಿಗೆ ನೋಟಿಸ್ ಜಾರಿ ಮಾಡಿರುವ ಅಧಿಕಾರಿಗಳು ಸಂತೋಷ್ ಬಂಧನಕ್ಕೂ ಮುನ್ನ ಯಾಕೆ ನೋಟಿಸ್ ಜಾರಿ ಮಾಡಿಲ್ಲ ಎಂದು ಪ್ರಶ್ನಿಸಿದ್ದರು.