Friday, 20th September 2024

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಅಲಂಕರಿಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಕ್ಷೇತ್ರದ ಶಾಸಕ, ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪ ನವರ ಪುತ್ರ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಹಿರಿಯರ ಆಶೀರ್ವಾದ ಪಡೆದು, ನಳೀನ್​ ಕುಮಾರ್​ ಕಟೀಲ್ ಅವರಿಂದ ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು.

ಸಮಾರಂಭದಲ್ಲಿ ಭಾಗವಹಿಸಿ ಬಿ.ಎಸ್‌.ಯಡಿಯೂರಪ್ಪ ಮಾತನಾಡಿ, “ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಅವರ ಆದೇಶ ಮತ್ತು ಆಶೀರ್ವಾದದಂತೆ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ್ದಾನೆ. ಅಮಿತ್ ಶಾ ಅವರನ್ನು ಬೆಂಗಳೂರಿಗೆ ಕರೆಸಿ ಒಂದು ಲಕ್ಷ ಜನ ಸೇರಿಸಿ ಕಾರ್ಯಕ್ರಮ ಮಾಡುವ ಅಪೇಕ್ಷೆ ಇದೆ. ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನಾಗಿ ಘೋಷಣೆ ಮಾಡಿದ ಬಳಿಕ ರಾಜ್ಯದಲ್ಲಿ ಕಾರ್ಯಕರ್ತರ ಉತ್ಸಾಹ ಕಾಣುತ್ತಿದೆ. ಎಲ್ಲಾ ನಾಯಕರು ಬಂದು ವಿಜಯೇಂದ್ರಗೆ ಆಶೀರ್ವಾದ ಮಾಡಿದ್ದು ತುಂಬಾ ಸಂತೋಷವಾಗಿದೆ” ಎಂದರು.

ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, “ಎಲ್ಲ ಹಿರಿಯರ ಮಾರ್ಗದರ್ಶನದಲ್ಲಿ ನಾನು ನಾಲ್ಕು ವರ್ಷ ಕೆಲಸ ಮಾಡಿದ್ದೇನೆ. 18 ಬಾರಿ ರಾಜ್ಯ ಪ್ರವಾಸ ಮಾಡಿದ್ದೇನೆ. ಅಧಿಕಾರ ವಹಿಸಿಕೊಂಡ 6 ತಿಂಗಳಲ್ಲಿ ಕೋವಿಡ್ ಬಂತು. ಸೇವಾ ಹಿ ಸಂಘಟನ್ ಹೆಸರಿನಲ್ಲಿ ಕೋವಿಡ್ ವೇಳೆ ಸೇವೆ ಮಾಡಿದ್ದೇವೆ. ಅತಿ ಹೆಚ್ಚು ಮೋರ್ಚಾ, ಪ್ರಕೋಷ್ಠ ನಿರ್ಮಿಸಿ, ಕೆಲಸ ಮಾಡಿದ್ದೇವೆ. 4 ವರ್ಷ ಮೂರು ತಿಂಗಳು ಸತತ ಕೆಲಸ ಮಾಡುವಲ್ಲಿ ಯಶಸ್ವಿಯಾಗಿ ದ್ದೇನೆ. ಈಗ ನಾವೆಲ್ಲರೂ ವಿಜಯೇಂದ್ರರಿಗೆ ಸಹಕಾರ ಕೊಡುತ್ತೇವೆ ಎಂದು ಹೇಳಿದರು.