ಗೌರಿಬಿದನೂರು : ಸಮುದಾಯದಲ್ಲಿ ಹೆಚ್ಚಿನ ಗಿಡ ನೆಟ್ಟು ನೀರುಣಿಸಿ ಪರಿಸರ ಸಂರಕ್ಷಣೆ ಮಾಡುವ ಮೂಲಕ ಶ್ರಮದಾನ ಮಾಡಿ ಸ್ವಚ್ಛ ಮತ್ತು ಹಚ್ಛ ಹಸಿರಿನ ಪರಿಸರ ನಿರ್ಮಾಣಕ್ಕೆ ನಾವೆಲ್ಲರೂ ಸಾಕ್ಷಿಯಾಗಬೇಕಾಗಿದೆ, ಇದರಿಂದಾಗಿ ಎಲ್ಲರ ಬದುಕು ಹಸನಾಗುವುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಜಿಲ್ಲಾ ನಿರ್ದೇಶಕ ಪ್ರಶಾಂತ್ ತಿಳಿಸಿದರು.
ತಾಲ್ಲೂಕಿನ ಆರ್ಕುಂದ ಗ್ರಾಮದ ಹೊರವಲಯದಲ್ಲಿನ ಸಸ್ಯಕ್ಷೇತ್ರದಲ್ಲಿ ಸಾಮಾಜಿಕ ಅರಣ್ಯೀಕರಣ ಯೋಜನೆ ಯಡಿಯಲ್ಲಿ ಗಿಡಗಳನ್ನು ನೆಟ್ಟು ನೀರುಣಿಸಿ ಅವರು ಭಾಗವಹಿಸಿ ಮಾತನಾಡಿದರು.
ನೆರೆಯ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯದ ಜತೆಗೆ ಹೆಚ್ಚು ಗಿಡಗಳನ್ನು ನೆಟ್ಟು ಪೋಷಿಸಬೇಕು. ಮಣ್ಣಿನ ಸವಕಳಿ ಯನ್ನು ತಪ್ಪಿಸಿ ನೀರಿನ ಅಪವ್ಯಯವನ್ನು ನಿಯಂತ್ರಿಸುವ ಕಾರ್ಯಕ್ಕೆ ಮುಂದಾಗಬೇಕು. ಹೆಚ್ಚಿನ ಗಿಡಗಳನ್ನು ನೆಟ್ಟು ಪೋಷಣೆ ಮಾಡಿದಲ್ಲಿ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನಾವೆಲ್ಲರೂ ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರಧಾರಿಗಳಾಗಬೇಕು. ಪರಿಸರ ಸಂರಕ್ಷಣೆ ಮತ್ತು ನೈಸರ್ಗಿಕ ಸಂಪನ್ಮೂಲ ಗಳನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ಮುಂದಾದಲ್ಲಿ ಭವಿಷ್ಯದಲ್ಲಿ ಆರೋಗ್ಯವಂತರಾಗಿರಲು ಸಾಧ್ಯವಾಗುತ್ತದೆ. ಶ್ರೀಕ್ಷೇತ್ರ ವತಿಯಿಂದ ಪ್ರತೀ ವರ್ಷ ಸಾಮಾಜಿಕ ಅರಣ್ಯೀಕರಣ ಯೋಜನೆಯಡಿಯಲ್ಲಿ ಸಾವಿರಾರು ಗಿಡಗಳನ್ನು ನೆಟ್ಟು ಫೊಷಣೆ ಮಾಡುವ ಕಾರ್ಯಕ್ಕೆ ಮುಂದಾಗುತ್ತಿದ್ದೇವೆ ಎಂದು ತಿಳಿಸಿದರು.
ಸ್ಥಳೀಯ ಮುಖಂಡರು ಮತ್ತು ಪರಿಸರಪ್ರೇಮಿ ಎ.ಎಸ್.ಜಗನ್ನಾಥ್ ಮಾತನಾಡಿ, ಕಳೆದ ೫-೬ ವರ್ಷಗಳಿಂದಲೂ ನಿಸ್ವಾರ್ಥವಾಗಿ ಮಾಡುತ್ತಿರುವ ಪರಿಸರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಸಹಕಾರಿಯಾಗಿರುವುದು ಸಂತಸದ ವಿಚಾರವಾಗಿದೆ. ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕಾರ್ಯಗಳ ಜೊತೆಗೆ ಪರಿಸರ ಸಂರಕ್ಷಣಾ ಕಾರ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದಲ್ಲಿ ಭವಿಷ್ಯಕ್ಕೆ ಅಗತ್ಯವಿರುವ ನೈಸರ್ಗಿಕ ಸಂಪತ್ತನ್ನು ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಈ ಪ್ರದೇಶದಲ್ಲಿ ನಿರಂತರವಾಗಿ ಪರಿಸರ ಸಂರಕ್ಷಣಾ ಕಾರ್ಯಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ನಾಗರಾಜ್ ನಾಯಕ್, ವಲಯ ಅಧಿಕಾರಿ ರಾಜೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಇದನ್ನೂ ಓದಿ: Chikkaballapur News: ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ-ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ